2.120 ಕೆ.ಜಿ. ಗಾಂಜಾ ಜಪ್ತಿ; ಬೈಕ್ ಸೇರಿದಂತೆ ಒಟ್ಟು ₹1,00,500 ಮೌಲ್ಯದ ವಸ್ತು ವಶ
ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದವರ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸುಮಾರು 2.120 ಕೆ.ಜಿ. ಗಾಂಜಾ ಸೇರಿದಂತೆ ಒಟ್ಟು ₹1,00,500 ಮೌಲ್ಯದ ಮಾದಕ ವಸ್ತು ಹಾಗೂ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.
ದಿನಾಂಕ 26-11-2026ರಂದು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಿಸಿಬಿ ವಿಭಾಗದ ಪೊಲೀಸ್ ಇನ್ಸ್ಪೆಕ್ಟರ್ ಮಂಜುನಾಥ ನಾಯಿಕ ಅವರ ನೇತೃತ್ವದಲ್ಲಿ ಪಿಎಸ್ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ನಡೆಸಿದೆ.
ಬೆಳಗಾವಿಯ ಆಟೋ ನಗರ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಶ್ರೀ ಲಕ್ಷ್ಮೀ ಸಾ ಮಿಲ್ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಹೀರೋ ಪಲ್ಸರ್ ಬೈಕ್ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಶಿವಾನಂದ ಅಲಿಯಾಸ್ ಪರಶ್ಯಾ ಸುಕ್ಕನ್ನವರ (23), ನಾಗರಾಜ ರಾಮಚಂದ್ರ ಭೋವಿವಡ್ಡರ (24) ಹಾಗೂ ಲಖನ ಕೆಂಪಣ್ಣ ಕಾಟಾಬಳಿ (26) ಎಂಬ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರೆಲ್ಲರೂ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಸುತ್ತಮುತ್ತಲಿನ ನಿವಾಸಿಗಳಾಗಿದ್ದಾರೆ.
ವಿಚಾರಣೆ ವೇಳೆ ಆರೋಪಿಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ಶಿರಪುರ ನಿವಾಸಿ ರಾಜೇಶ ಚೌಹಾನ್ ಎಂಬಾತನಿಂದ ಗಾಂಜಾ ತಂದಿರುವುದಾಗಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 257/2026ರ ಅಡಿಯಲ್ಲಿ ಎನ್ಡಿಪಿಎಸ್ ಕಾಯ್ದೆಯ ಕಲಂ 8(c), 20(b)(ii)(B)ರ ಪ್ರಕಾರ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
.
ಪ್ರಕರಣದ ತನಿಖೆ ಮುಂದುವರಿದಿದ್ದು, ಗಾಂಜಾ ಪೂರೈಕೆಯ ಜಾಲದ ಕುರಿತು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ
