ಕ್ರೈಸ್ತ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ ಹಾಗೂ ಸ್ವಾವಲಂಬನೆಗಾಗಿ ನಿಗಮದ ಮೂಲಕ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಎಸ್. ಜಾಫೆಟ್ ತಿಳಿಸಿದ್ದಾರೆ.
ಇಂದು ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕ್ರೈಸ್ತ ಸಮುದಾಯದ ಏಳಿಗೆಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿರುವುದಕ್ಕೆ ಕರ್ನಾಟಕ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಎಸ್. ಜಾಫೆಟ್ ಅವರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. 2023–24ನೇ ಸಾಲಿನಲ್ಲಿ ನಿಗಮದ ಘೋಷಣೆಯಾಗಿದ್ದು, 2025–26ನೇ ಸಾಲಿನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹250 ಕೋಟಿ ಅನುದಾನ ಘೋಷಿಸಿದ್ದರು. ಅದರಲ್ಲಿ ಬಿಡುಗಡೆಯಾದ ₹85 ಕೋಟಿ ಅನುದಾನವನ್ನು ಕೇವಲ ನಾಲ್ಕೈದು ತಿಂಗಳ ಅವಧಿಯಲ್ಲೇ ಸಮರ್ಪಕವಾಗಿ ಬಳಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಅಲ್ಲದೆ, ಈಗಾಗಲೇ ₹85 ಕೋಟಿ ಹಣವನ್ನು ವಿವಿಧ ಯೋಜನೆಗಳಿಗೆ ವಿನಿಯೋಗಿಸಲಾಗಿದೆ. ಕೇವಲ ಎಷ್ಟು ಹಣ ಖರ್ಚಾಗಿದೆ ಎಂಬ ಅಂಕಿಅಂಶಗಳಿಗಿಂತ, ಸರ್ಕಾರದ ಯೋಜನೆಗಳು ಸಮುದಾಯದ ಕಟ್ಟಕಡೆಯ ವ್ಯಕ್ತಿಗೆ ಎಷ್ಟರಮಟ್ಟಿಗೆ ತಲುಪುತ್ತಿವೆ ಎಂಬುದು ಅತ್ಯಂತ ಮುಖ್ಯವಾಗಿದೆ ಎಂದರು.
ನಿಗಮದ ವತಿಯಿಂದ ರೈತರು ಸೇರಿದಂತೆ ಸಮುದಾಯದ ವಿವಿಧ ವರ್ಗಗಳ ಆರ್ಥಿಕ ಸಬಲೀಕರಣಕ್ಕಾಗಿ ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗಿದ್ದು, ವಿಶೇಷವಾಗಿ ಈ ವರ್ಷದಿಂದ ಚರ್ಚ್ಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಕ್ರೈಸ್ತ ಸಮುದಾಯದ ಜನರು ಕೇವಲ ಸರ್ಕಾರದ ಸೌಲಭ್ಯಗಳ ಮೇಲೆ ಅವಲಂಬಿತರಾಗದೆ, ಮುಂದಿನ ದಿನಗಳಲ್ಲಿ ತಮ್ಮ ಸಮುದಾಯವನ್ನು ತಾವೇ ಕಟ್ಟಿ ಬೆಳೆಸುವಂತಹ ಆರ್ಥಿಕ ಹಾಗೂ ಸಾಮಾಜಿಕ ಸಾಮರ್ಥ್ಯವನ್ನು ರೂಪಿಸಿಕೊಳ್ಳಬೇಕು ಎಂಬುದು ನಿಗಮದ ಪ್ರಮುಖ ಆಶಯವಾಗಿದೆ. ಈ ನಿಟ್ಟಿನಲ್ಲಿ ಯೋಜನೆಗಳ ಅನುಷ್ಠಾನವನ್ನು ಖುದ್ದಾಗಿ ಪರಿಶೀಲಿಸಲು ತಾವು ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದು, ಎಲ್ಲಾ ಜಿಲ್ಲೆಗಳ ಅರ್ಹ ಫಲಾನುಭವಿಗಳಿಗೂ ತಾರತಮ್ಯವಿಲ್ಲದೆ ಸೌಲಭ್ಯಗಳನ್ನು ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಾ. ಎಸ್. ಜಾಫೆಟ್ ಸ್ಪಷ್ಟಪಡಿಸಿದ್ದಾರೆ.
ಈ ವೇಳೆ ಉತ್ತರ ಶಾಸಕ ಆಸೀಫ್ ಸೇಠ್ ಸೇರಿದಂತೆ ಸಮಾಜದ ಪ್ರಮುಖರು ಉಪಸ್ಥಿತರಿದ್ಧರು.
