ಬರಗಾಲದ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಬ್ಯಾಂಕ್ಗಳು ಮಾನವೀಯ ದೃಷ್ಟಿಕೋನದಿಂದ ಸ್ಪಂದಿಸಬೇಕು. ರೈತರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಾಲ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು. ರೈತರಿಗೆ ಅನಗತ್ಯ ಕಿರುಕುಳ ನೀಡಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ನ.16)
ನಡೆದ 2026–27ನೇ ಸಾಲಿನ ತೃತೀಯ ತ್ರೈಮಾಸಿಕ ಜಿಲ್ಲಾ ಸಮಾಲೋಚನಾ ಸಮಿತಿ (DCC) ಹಾಗೂ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ (DLRC) ಅಧ್ಯಕ್ಷತೆ ವಹಿಸಿ ಅವರು ಮಾತನಾಡಿರು.
ಸಂಕಷ್ಟದಲ್ಲಿರುವ ರೈತರಿಂದ ಸಾಲ ವಸೂಲಾತಿಗೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹೇರುವುದು ಅಥವಾ ತಕ್ಷಣ ವಸೂಲಾತಿಗೆ ಮುಂದಾಗುವುದು ಸೂಕ್ತವಲ್ಲ. ರೈತರಿಗೆ ಹಂತ ಹಂತವಾಗಿ ಸಾಲ ಮರುಪಾವತಿಸಲು ಅಗತ್ಯ ಕಾಲಾವಕಾಶ ನೀಡುವುದರ ಜೊತೆಗೆ, ಮುಂದಿನ ಬೆಳೆಗೆ ಅನುಕೂಲವಾಗುವಂತೆ ಬೆಳೆ ಸಾಲ ಮಂಜೂರಾತಿಗೂ ಬ್ಯಾಂಕ್ ಅಧಿಕಾರಿಗಳು ಸಹಕರಿಸಬೇಕು ಎಂದು ಸೂಚನೆ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ದೊರೆಯಬೇಕಾದ ಸೌಲಭ್ಯಗಳನ್ನು ಬ್ಯಾಂಕ್ ಅಧಿಕಾರಿಗಳು ವಿಳಂಬವಿಲ್ಲದೆ ಸಮರ್ಪಕವಾಗಿ ಒದಗಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದಾಗಿದೆ. ಆರ್ಥಿಕವಾಗಿ ಹಿಂದುಳಿದವರು ಹಾಗೂ ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯಗಳನ್ನು ಒದಗಿಸಿ ಬ್ಯಾಂಕ್ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಹೇಳಿದರು.
ರೈತರು ಹಾಗೂ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಬ್ಯಾಂಕ್ ಅಧಿಕಾರಿಗಳು ಯಾವುದೇ ರೀತಿಯ ಹಿಂದೇಟು ಹಾಕದೆ ಅರ್ಹ ಫಲಾನುಭವಿಗಳಿಗೆ ಆದ್ಯತೆ ಮೇಲೆ ಸಾಲ ಮಂಜೂರು ಮಾಡಬೇಕು.
ಗ್ರಾಮೀಣ ಭಾಗದ ರೈತರ ಕೃಷಿ ಚಟುವಟಿಕೆಗಳು ಹಾಗೂ ಜನರ ಆರ್ಥಿಕ ಅಗತ್ಯಗಳಿಗೆ ಅನುಗುಣವಾಗಿ ಸಮಗ್ರ ಸಮೀಕ್ಷೆ ನಡೆಸಿ, ಅವಶ್ಯಕತೆ ಇರುವ ಪ್ರದೇಶಗಳಲ್ಲಿ ಹೊಸ ಬ್ಯಾಂಕ್ ಶಾಖೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಬ್ಯಾಂಕ್ಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯ ಆದ್ಯತೆ ನೀಡುವುದರೊಂದಿಗೆ ಸಿಬ್ಬಂದಿಗಳು ಗ್ರಾಹಕರೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಬೇಕು.
ರೈತರು ಮತ್ತು ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್ ಸೇವೆಗಳು ಸುಲಭವಾಗಿ ದೊರೆಯುವಂತೆ ಅಧಿಕಾರಿಗಳು ಸಕಾರಾತ್ಮಕವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರಿ ಯೋಜನೆಗಳ ಪ್ರಯೋಜನ ಅರ್ಹರಿಗೆ ತಲುಪಿಸುವಲ್ಲಿ ಬ್ಯಾಂಕ್ಗಳು ಪ್ರಮುಖ ಪಾತ್ರ ವಹಿಸಬೇಕಿದ್ದು, ಜನಸ್ನೇಹಿ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸಲು ಬ್ಯಾಂಕ್ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಅವರು ನಿರ್ದೇಶನ ನೀಡಿದರು.
ಬ್ಯಾಂಕ್ ಅಧಿಕಾರಿಗಳ ವಿರುದ್ಧ ಕ್ರಮ:
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಮಾತನಾಡಿ, ಅರ್ಹ ಫಲಾನುಭವಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಸಾಲ ಮಂಜೂರಾತಿ ಸಂದರ್ಭದಲ್ಲಿ ವಿನಾಕಾರಣ ನೆಪ ಹೇಳಿ ಅರ್ಜಿಗಳನ್ನು ತಿರಸ್ಕರಿಸುವುದು ಅಥವಾ ವಿಳಂಬ ಮಾಡುವುದು ಸರಿಯಲ್ಲ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬ್ಯಾಂಕ್ ಗಳಲ್ಲಿ ಕನ್ನಡ ಬಳಕೆ ಕಡ್ಡಾಯ:
ಬ್ಯಾಂಕ್ಗಳಲ್ಲಿ ಗ್ರಾಹಕರೊಂದಿಗೆ ಸಿಬ್ಬಂದಿಗಳು ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿಯೇ ವ್ಯವಹರಿಸಬೇಕು. ಭಾಷೆಯ ಕಾರಣದಿಂದ ಗ್ರಾಹಕರಿಗೆ ತೊಂದರೆ ಅಥವಾ ಸಂವಹನದ ಸಮಸ್ಯೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳು ಸುಲಭವಾಗಿ ದೊರೆಯುವಂತೆ ಕನ್ನಡ ಭಾಷೆಯ ಬಳಕೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಎಲ್ಲ ಬ್ಯಾಂಕ್ ಅಧಿಕಾರಿಗಳು ತಮ್ಮ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಸೂಚಿಸಿದರು.
ಪ್ರಚಾರ ಪತ್ರ ಬಿಡುಗಡೆ:
ಇದೇ ಸಂದರ್ಭದಲ್ಲಿ ‘ಹಣಕಾಸು ಯೋಜನೆ ಸ್ಯಾಚ್ಯುರೇಶನ್ ಅಭಿಯಾನ’ ಹಾಗೂ ‘ಪ್ರಧಾನ ಮಂತ್ರಿ ಫಸಲ್ (ಬೆಳೆ) ಬಿಮಾ ಯೋಜನೆ’ಯ ಪ್ರಚಾರ ಪತ್ರಗಳನ್ನು ಬೆಳಗಾವಿ ಲೋಕಸಭಾ ಸಂಸದ ಜಗದೀಶ್ ಶೆಟ್ಟರ್, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ಶಿಂಧೆ ಬಿಡುಗಡೆಗೊಳಿಸಿದರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪ್ರಶಾಂತ ಘೋಡಕೆ, ಕೆನರಾ ಬ್ಯಾಂಕ್ ಸಹಾಯಕ ಪ್ರಾದೇಶಿಕ ವ್ಯವಸ್ಥಾಪಕ ಜೆ.ಪರಮೇಶ್ವರನ್ ಸೇರಿ ವಿವಿಧ ಬ್ಯಾಂಕುಗಳ ಪ್ರಾದೇಶಿಕ ಮುಖ್ಯಸ್ಥರು, ಬ್ಯಾಂಕ್ ಪ್ರತಿನಿಧಿಗಳು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎನ್.ಆರ್.ಎಲ್.ಎಮ್. ಸ್ವಸಹಾಯ ಸಂಘದ ಮಹಿಳೆಯರು ಸಭೆಯಲ್ಲಿ ಹಾಜರಿದ್ದರು.
