ಬಾಗಲಕೋಟೆ ಜಿಲ್ಲೆಯ ಇಳಕಲ್ ಮತ್ತು ಹುನಗುಂದ ನಗರಗಳಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗಿದೆ. ಜಾಕ್ವೆಲ್ ಮೋಟಾರ್ ದುರಸ್ತಿ ಹಿನ್ನೆಲೆಯಲ್ಲಿ ನೀರು ಸರಬರಾಜು ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ್ದಾರೆ.

ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿರುವ ಜಾಕ್ವೆಲ್ ಮೋಟಾರ್ ಕೆಟ್ಟು ರಿಪೇರಿಗೆ ಬಂದಿರುವುದರಿಂದ ಕಳೆದ 15 ದಿನಗಳಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್, ಹುನಗುಂದ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರಗಳಿಗೆ ಕುಡಿಯುವ ನೀರು ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಎರಡು ವಾರಗಳಿಂದ ಹನಿ ನೀರಿಗೂ ಪರದಾಡುತ್ತಿರುವ ಸಾರ್ವಜನಿಕರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಜನರ ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ, ಆಲಮಟ್ಟಿ ಹಿನ್ನೀರಿನ ಜಾಕ್ವೆಲ್ಗೆ ಖುದ್ದು ಭೇಟಿ ನೀಡಿ ಮೋಟಾರ್ ರಿಪೇರಿ ಕಾರ್ಯವನ್ನು ಪರಿಶೀಲಿಸಿದರು. ದುರಸ್ತಿ ಕಾರ್ಯ ಅಂತಿಮ ಹಂತಕ್ಕೆ ತಲುಪಿದ್ದು, ಇಂದು ಸಂಜೆ ಅಥವಾ ಇನ್ನೊಂದು ದಿನದೊಳಗೆ ಮೂರೂ ನಗರಗಳಿಗೆ ಕುಡಿಯುವ ನೀರು ಸರಬರಾಜು ಪುನರಾರಂಭವಾಗಲಿದೆ ಎಂದು ಅಧಿಕಾರಿಗಳು ಹಾಗೂ ಸಚಿವರು ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.

