ಕಳೆದ ಮೂರು ದಿನಗಳಿಂದ ಹುಬ್ಬಳ್ಳಿಯ ಸೆಟ್ಲಿಮೆಂಟ್ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಸವರಾಜ ಜಾಧವ ಅವರ ಕುಟುಂಬದ ಮೇಲೆ ಕೆಲವರು ಹಲ್ಲೆ ನಡೆಸಲು ಸಂಚು ರೂಪಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಬೆಂಡಿಗೇರಿ ಪೊಲೀಸ್ ಠಾಣೆಯ ಎದುರು ನಡೆದ ಗಲಾಟೆಯ ಬಳಿಕ ಶ್ಯಾಮ್ ಜಾಧವ, ರವಿ ಜಾಧವ, ಗಣೇಶ ಜಾಧವ ಸೇರಿದಂತೆ ಹಲವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೇ ವಿಚಾರವನ್ನು ಮನಸ್ಸಿನಲ್ಲಿಟ್ಟುಕೊಂಡು ಸೇಡು ತೀರಿಸಿಕೊಳ್ಳಲು ಕೆಲವರು ಗುಂಪು ಕಟ್ಟಿಕೊಂಡು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಬಸವರಾಜ ಜಾಧವ ಅವರ ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ ಎಂದು ಬಸವರಾಜ ಜಾಧವ ಆರೋಪಿಸಿದ್ದಾರೆ.
ಇನ್ನೊಂದೆಡೆ, ಬಸವರಾಜ ಜಾಧವ ಅವರ ಮನೆಯಲ್ಲಿ ಮದುವೆ ಸಮಾರಂಭ ನಡೆಯಲಿದ್ದು, ಅದನ್ನು ಹಾಳು ಮಾಡುವ ಉದ್ದೇಶದಿಂದ ಈ ರೀತಿಯ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂಬುದು ಅವರ ಆರೋಪವಾಗಿದೆ.
ನಗರದ ಜನವಸತಿ ಪ್ರದೇಶದಲ್ಲೇ ಈ ರೀತಿಯ ಗಲಾಟೆ ಹಾಗೂ ಮಾರಕಾಸ್ತ್ರಗಳ ಪ್ರದರ್ಶನದ ಆರೋಪಗಳು ಕೇಳಿಬರುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಯಾವುದೇ ಅಹಿತಕರ ಘಟನೆ ಸಂಭವಿಸುವ ಮುನ್ನ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿದೆ.
ಹಾಗಾದರೆ ಸೆಟ್ಲಿಮೆಂಟ್ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಯಾವ ಕ್ರಮ ಕೈಗೊಳ್ಳಲಿದೆ? ಗಲಾಟೆಗಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಭದ್ರತೆ ಒದಗಿಸುವ ಜವಾಬ್ದಾರಿ ಪೊಲೀಸರ ಮೇಲಿದೆ. ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಆರೋಪಗಳ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.
