ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಧಾರವಾಡ-ಗೋವಾ ರಸ್ತೆಯ ಅಳ್ನಾವರ ಬಳಿ ಸಂಭವಿಸಿದೆ.
ಧಾರವಾಡ ಜಿಲ್ಲೆಯ ಅಳ್ನಾವರದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಮೂಲದ ದಯಾನಂದ ಶಿವಳ್ಳಿಮಠ (25) ಮೃತ ಬೈಕ್ ಸವಾರನೆಂದು ಗುರುತಿಸಲಾಗಿದೆ. ಬೈಕ್ ಸವಾರ ಅಳ್ನಾವರದಿಂದ ಧಾರವಾಡದತ್ತ ಬರುತ್ತಿದ್ದಾಗ ಹಾಗೂ ಕಾರು ಧಾರವಾಡ ಮಾರ್ಗವಾಗಿ ಅಳ್ನಾವರ ಕಡೆಗೆ ತೆರಳುವ ವೇಳೆ ಎರಡು ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನಿಗೆ ಗಂಭೀರ ಗಾಯವಾಗಿ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮೃತ ಬೈಕ್ ಸವಾರನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಧಾರವಾಡ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
