ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕುರಿತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೀಡಿರುವ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಆದರೆ ಈ ಹೇಳಿಕೆ ಕೇವಲ ರಾಜಕೀಯ ಲಾಭಕ್ಕಾಗಿ ನೀಡಿದ್ದೀರಾ ಅಥವಾ ಉತ್ತರ ಕರ್ನಾಟಕದ ಜನರ ಹಿತದೃಷ್ಟಿಯಿಂದ ನೀಡಿದ್ದೀರಾ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನಾಗೇಶ್ ಗೋಳಶೆಟ್ಟಿ ಆಗ್ರಹಿಸಿದ್ದಾರೆ.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಉಮೇಶ್ ಕತ್ತಿ ಅವರ ಪ್ರತ್ಯೇಕ ರಾಜ್ಯದ ಹೇಳಿಕೆಯನ್ನು ಉಲ್ಲೇಖಿಸಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಪ್ರತ್ಯೇಕ ರಾಜ್ಯವಾದರೆ ಅದಕ್ಕೆ ನಮ್ಮ ಬೆಂಬಲವೂ ಇದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಅವರಿಗೆ ಉತ್ತರ ಕರ್ನಾಟಕದ ಅನ್ಯಾಯದ ಮನವರಿಕೆಯಾಗಿದೆ ಎಂದು ಭಾವಿಸುತ್ತೇವೆ. ನಿಜವಾಗಿಯೂ ಉತ್ತರ ಕರ್ನಾಟಕದ ಸುಮಾರು ಮೂರು ಕೋಟಿ ಜನರ ಹಿತದೃಷ್ಟಿಯಿಂದ ಪ್ರತ್ಯೇಕ ರಾಜ್ಯದ ಪರವಾಗಿದ್ದರೆ, ತಮ್ಮ ಹೇಳಿಕೆಗೆ ಬದ್ಧರಾಗಿ ಮುಂದಿನ ಹೋರಾಟಕ್ಕೆ ಸಿದ್ಧರಾಗಬೇಕು. ಆಗ ಅವರ ಹೇಳಿಕೆಯನ್ನು ನಾವು ಬೆಂಬಲಿಸಿ ಗೌರವಿಸುತ್ತೇವೆ ಎಂದು ಸವಾಲು ಹಾಕಿದರು.
ಡಿ.2ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಕೃಷಿ, ಶಿಕ್ಷಣ, ನೀರಾವರಿ, ರಸ್ತೆ, ಸಾರಿಗೆ, ರೈಲ್ವೆ, ಮಾಧ್ಯಮ, ಉದ್ಯಮ, ಚಲನಚಿತ್ರೋದ್ಯಮ, ಪ್ರವಾಸೋದ್ಯಮ ಸೇರಿದಂತೆ ರಾಜಕೀಯ ಕ್ಷೇತ್ರಗಳಲ್ಲಿಯೂ ಆಗಿರುವ ಅನ್ಯಾಯವನ್ನು ಖಂಡಿಸಿ ನ್ಯಾಯಕ್ಕಾಗಿ ಹೋರಾಟ ನಡೆಸಲಾಗುವುದು ಎಂದರು.
ಕಬ್ಬು ಸೇರಿದಂತೆ ವಿವಿಧ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡುವಂತೆ ಹೋರಾಟ ನಡೆಸುತ್ತಿರುವ ರೈತರ ಪರವಾಗಿ ಧ್ವನಿ ಎತ್ತಲಾಗುವುದು. ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಮಹಿಳೆಯರು, ಯುವಕರು ಹಾಗೂ ಕಾರ್ಮಿಕ ವರ್ಗದ ಜನರ ಸ್ವಾವಲಂಬಿ ಮತ್ತು ಸ್ವಾಭಿಮಾನದ ಬದುಕಿಗಾಗಿ ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು. ಎಲ್ಲ ಸಂಘಟನೆಗಳ ಸಹಕಾರದೊಂದಿಗೆ ಸುವರ್ಣ ವಿಧಾನಸೌಧದ ಎದುರು ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಹೋರಾಟ ರೂಪಿಸಲಾಗುವುದು ಎಂದರು.
