State

ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ ಸಮ್ಮೇಳನದಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ

Share

ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದರು ಮತ್ತು ಶಾಸಕರ (CWP) ಭಾರತ ಪ್ರಾದೇಶಿಕ ಸಮ್ಮೇಳನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಭಾಗವಹಿಸಿದರು.
ಲೋಕಸಭೆಯ ಸಭಾಧ್ಯಕ್ಷರಾದ ಓಂ ಬಿರ್ಲಾ ಅವರ ಉಪಸ್ಥಿತಿಯಲ್ಲಿ ನಡೆಯುತ್ತಿರುವ ಈ ಎರಡು ದಿನಗಳ ಮಹತ್ವದ ಸಮ್ಮೇಳನದಲ್ಲಿ ದೇಶದ ವಿವಿಧ ಭಾಗಗಳ ಮಹಿಳಾ ಸಂಸದರು ಹಾಗೂ ಶಾಸಕರು ಪಾಲ್ಗೊಂಡಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವುದು, ರಾಜಕೀಯ ಮತ್ತು ಶಾಸಕಾಂಗ ಸಂಸ್ಥೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯವನ್ನು ಹೆಚ್ಚಿಸುವುದು ಹಾಗೂ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯಲ್ಲಿ ಮಹಿಳೆಯರ ಸಕ್ರಿಯ ಮತ್ತು ಅರ್ಥಪೂರ್ಣ ಭಾಗವಹಿಸುವಿಕೆಯನ್ನು ಖಚಿತಪಡಿಸುವ ಕುರಿತು ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ.

ಮಹಿಳೆಯರು ನಾಯಕತ್ವ ವಹಿಸಿಕೊಂಡಾಗ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಿಷ್ಠ, ಸಮಾನತೆ ಮತ್ತು ಒಳಗೊಳ್ಳುವಿಕೆಯಿಂದ ಕೂಡಿರುತ್ತದೆ ಎಂಬ ಆಶಯದೊಂದಿಗೆ ಈ ಸಮ್ಮೇಳನ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಸಭೆಯ ಉಪಸಭಾಪತಿ ಹರಿವಂಶ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಕರ್ನಾಟಕ ವಿಧಾನಸಭೆಯ ಸ್ಪೀಕರ್ ಜಿ.ಎಸ್. ಪಾಟೀಲ, ಸಿಡಬ್ಲ್ಯೂಪಿ ಭಾರತ ಪ್ರಾದೇಶಿಕ ಅಧ್ಯಕ್ಷೆ ಡಾ. ಡಿ. ಪುರಂದೇಶ್ವರಿ, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಉಪಸಭಾಪತಿ ಡಾ. ಉಮಾಶ್ರೀ, ವಿಧಾನಸಭೆಯ ಉಪಸಭಾಪತಿ ಮಾಂಕಾಳ ವೈದ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ಭಾಗವಹಿಸಿರುವ ಕುರಿತು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಂತಸ ವ್ಯಕ್ತಪಡಿಸಿದ್ದು, ಮಹಿಳಾ ನಾಯಕತ್ವ, ಪ್ರಾತಿನಿಧ್ಯ ಮತ್ತು ಪ್ರಜಾಪ್ರಭುತ್ವದಲ್ಲಿ ಮಹಿಳೆಯರ ಪಾತ್ರವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಇಂತಹ ವೇದಿಕೆಗಳು ಮಹತ್ವದ ಪಾತ್ರ ವಹಿಸಲಿವೆ ಎಂದು ತಿಳಿಸಿದ್ದಾರೆ.

Tags:

error: Content is protected !!