Accident

ಲಾರಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ, ಮತ್ತೋರ್ವನಿಗೆ ಗಂಭೀರ ಗಾಯ

Share

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸ್ವಾಮಿಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಚೋರನೂರು ಗ್ರಾಮದ ನಿವಾಸಿ ರವಿಚಂದ್ರ (28) ಮೃತಪಟ್ಟ ದುರ್ದೈವಿಯಾಗಿದ್ದು, ಇವರೊಂದಿಗೆ ಬೈಕಿನ ಹಿಂದೆ ಸವಾರರಾಗಿದ್ದ ಲೋಕೇಶ್ ಎಂಬುವವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ದೇವಗಿರಿ ಗ್ರಾಮದಿಂದ ಸ್ವಾಮಿಹಳ್ಳಿಯತ್ತ ದ್ವಿಚಕ್ರ ವಾಹನದಲ್ಲಿ ಇಬ್ಬರು ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಲಾರಿ ಅಜಾಗರೂಕತೆಯಿಂದ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ನಿಯಂತ್ರಣ ತಪ್ಪಿದ ರವಿಚಂದ್ರ ಅವರು ಲಾರಿಯ ಚಕ್ರದ ಅಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಲೋಕೇಶ್ ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳದಿಂದ ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Tags:

error: Content is protected !!