ಬೆಳಗಾವಿ ಜಿಲ್ಲೆಯ ಹಿರಿಯ ದಲಿತ ನಾಯಕ, ಸಾಮಾಜಿಕ ಕಾರ್ಯಕರ್ತ ಹಾಗೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡ ಮಲ್ಲೇಶ್ ಚೌಗುಲೆ ಅವರನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಎಸ್ಐಐಡಿಸಿ) ರಾಜ್ಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಅವರ ಸುದೀರ್ಘ ಸಾಮಾಜಿಕ, ರಾಜಕೀಯ ಹಾಗೂ ಸಂಘಟನಾತ್ಮಕ ಸೇವೆಯನ್ನು ಗುರುತಿಸಿ ರಾಜ್ಯಮಟ್ಟದ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.
ಸುಮಾರು 54 ವರ್ಷಗಳ ಹಿಂದೆ ಮಹಾರಾಷ್ಟ್ರದ ಮುಂಬೈನಲ್ಲಿ ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಯುವ ನಾಯಕರಾಗಿ ಗುರುತಿಸಿಕೊಂಡಿದ್ದ ಮಲ್ಲೇಶ್ ಚೌಗುಲೆ, ಅಂದಿನಿಂದಲೂ ದಲಿತ ಚಳವಳಿ ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ದಲಿತ ಸಮುದಾಯದ ಹಕ್ಕುಗಳು, ಯುವಜನರ ಸಂಘಟನೆ ಮತ್ತು ಸಾಮಾಜಿಕ ಸಮಾನತೆಗಾಗಿ ನಿರಂತರವಾಗಿ ಶ್ರಮಿಸುತ್ತಾ ಬಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿಯೂ ಅವರು ಹಲವು ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷರಾಗಿ ಹಾಗೂ ಕಾಂಗ್ರೆಸ್ ಎಸ್ಸಿ-ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎಸ್ಸಿ ವಿಭಾಗದ ರಾಜ್ಯಮಟ್ಟದ ಸಂಘಟನಾತ್ಮಕ ಚಟುವಟಿಕೆಗಳಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ. ಪಕ್ಷದ ಸಂಘಟನೆ ಬಲಪಡಿಸುವುದು, ಚುನಾವಣಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಸೇರಿದಂತೆ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.
ಸಾಮಾಜಿಕ ಸೇವೆಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿ
ಮಲ್ಲೇಶ್ ಚೌಗುಲೆ ಅವರ ಸಾಮಾಜಿಕ ಸೇವೆ ಹಾಗೂ ದಲಿತ ಸಮುದಾಯದ ಏಳಿಗೆಗಾಗಿ ಸಲ್ಲಿಸಿದ ಕೊಡುಗೆಯನ್ನು ಗುರುತಿಸಿ ಹಲವು ಪ್ರತಿಷ್ಠಿತ ಪ್ರಶಸ್ತಿಗಳು ಲಭಿಸಿವೆ. ಮಲೇಷ್ಯಾದ ಕೌಲಾಲಂಪುರದಲ್ಲಿ ಅಂತರರಾಷ್ಟ್ರೀಯ ದಲಿತ ಸಾಹಿತ್ಯ ಪರಿಷತ್ತು ವತಿಯಿಂದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಅಲ್ಲದೆ, ಭಾರತ ಸರ್ಕಾರದ ರಾಷ್ಟ್ರೀಯ ಯುವ ಪ್ರಶಸ್ತಿ, ಕರ್ನಾಟಕ ಸರ್ಕಾರದ ರಾಜ್ಯ ಯುವ ಪ್ರಶಸ್ತಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಗೌರವಕ್ಕೂ ಅವರು ಪಾತ್ರರಾಗಿದ್ದಾರೆ.
ಪ್ರಸ್ತುತ ನವದೆಹಲಿಯ ಅಖಿಲ ಭಾರತ ದಲಿತ ಯುವ ಸಂಘಟನೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಅವರು, ಕರ್ನಾಟಕ ಸರ್ಕಾರದ ವಿವಿಧ ಸಮಿತಿಗಳಲ್ಲಿಯೂ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ, ಯುವಜನ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿಯೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕರ ಬೆಂಬಲ
ಮಲ್ಲೇಶ್ ಚೌಗುಲೆ ಅವರ ನೇಮಕಾತಿಗೆ ಬೆಳಗಾವಿ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರ ಶಿಫಾರಸು ಹಾಗೂ ಬೆಂಬಲ ಪ್ರಮುಖವಾಗಿತ್ತು ಎಂದು ಹೇಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ರಾಜು) ಸೇಠ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಹಿರಿಯ ಮುಖಂಡರು ಅವರ ನೇಮಕಾತಿಗೆ ಬೆಂಬಲ ಸೂಚಿಸಿದ್ದಾರೆ.
ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಶೇಗಾವಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜಾ ಸಲೀಂ, ಯುವ ನಾಯಕರಾದ ಮೃಣಾಲ್ ಹೆಬ್ಬಾಳ್ಕರ್, ರಾಹುಲ್ ಜಾರಕಿಹೊಳಿ ಸೇರಿದಂತೆ ಹಲವು ಮುಖಂಡರ ಶಿಫಾರಸು ಕೂಡ ನೇಮಕಾತಿಗೆ ಪೂರಕವಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಪ್ರಮುಖ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಯಾದ ಕೆಎಸ್ಐಐಡಿಸಿಯಲ್ಲಿ ನಿರ್ದೇಶಕರ ಜವಾಬ್ದಾರಿ ದೊರೆತಿರುವುದು ಮಲ್ಲೇಶ್ ಚೌಗುಲೆ ಅವರ ಸುದೀರ್ಘ ಸಾರ್ವಜನಿಕ ಸೇವೆಗೆ ಸಂದ ಗೌರವವೆಂದು ಅವರ ಬೆಂಬಲಿಗರು ಅಭಿಪ್ರಾಯಪಟ್ಟಿದ್ದಾರೆ. ಅವರ ನೇಮಕಾತಿಯಿಂದ ಬೆಳಗಾವಿ ಜಿಲ್ಲೆಯ ದಲಿತ, ಸಾಮಾಜಿಕ ಹಾಗೂ ಕಾಂಗ್ರೆಸ್ ವಲಯಗಳಲ್ಲಿ ಸಂತಸ ವ್ಯಕ್ತವಾಗಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಅಭಿಮಾನಿಗಳು ಮತ್ತು ಹಿತೈಷಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ..
