ರಾಜ್ಯ ಸರ್ಕಾರದ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಬಾಗಲಕೋಟೆಯಲ್ಲಿ ಪ್ರತಿಭಟನೆಯ ಕಿಚ್ಚು ಹೊತ್ತಿಕೊಂಡಿದೆ. ಜನಸಾಮಾನ್ಯರ ಮೇಲೆ ಬರೆ ಎಳೆಯುತ್ತಿರುವ ಸರ್ಕಾರದ ವಿರುದ್ಧ ಕೆಆರ್ಎಸ್ ಪಕ್ಷದ ಕಾರ್ಯಕರ್ತರು ವಿನೂತನವಾಗಿ ತಮಟೆ ಬಾರಿಸುವ ಮೂಲಕ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರವು ಇತ್ತೀಚೆಗೆ ಏರಿಕೆ ಮಾಡಿರುವ ಬಸ್ ಪ್ರಯಾಣ ದರ ಮತ್ತು ಹಾಲಿನ ದರವನ್ನು ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿ ಬಾಗಲಕೋಟೆ ನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷದ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಹಳೆ ಆರ್ಟಿಓ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ತಮಟೆ ಬಾರಿಸುತ್ತಾ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಧಿಕ್ಕಾರ ಕೂಗಿ ತೀವ್ರ ಆಕ್ರೋಶ ಹೊರಹಾಕಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಬಸ್ ಹಾಗೂ ಹಾಲಿನ ದರ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. ಬಳಿಕ ಜಿಲ್ಲಾಡಳಿತ ಭವನಕ್ಕೆ ತೆರಳಿದ ಕಾರ್ಯಕರ್ತರು, ದರ ಏರಿಕೆ ನಿರ್ಧಾರವನ್ನು ಕೂಡಲೇ ರದ್ದುಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
