Chikkodi

ಚಿಕ್ಕೋಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪ್ರಭಾವತಿ ಪಾಟೀಲ ಅಧಿಕೃತವಾಗಿ ಅಧಿಕಾರ ಸ್ವೀಕಾರ — ಎಸ್ಸೆಸ್ಸೆಲ್ಸಿ ಫಲಿತಾಂಶ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ

Share

ಚಿಕ್ಕೋಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಪ್ರಭಾವತಿ ಪಾಟೀಲ ಅವರು ಕಾಯಂ ಅಧಿಕಾರಿಯಾಗಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ.

ಕಳೆದ ಎರಡೂವರೆ ವರ್ಷಗಳಿಂದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಅವರು, ಇಂದಿನಿಂದ ಕಾಯಂ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಎರಡೂವರೆ ವರ್ಷಗಳ ಪ್ರಭಾರ ಅವಧಿಯಲ್ಲಿ ತಮಗೆ ನಿರಂತರ ಸಹಾಯ, ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡಿದ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕ ಗಣೇಶ ಹುಕ್ಕೇರಿ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹಾಗೂ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಂಟು ವಲಯಗಳಲ್ಲಿ ಚಿಕ್ಕೋಡಿ ತಾಲೂಕಿಗೆ ವಿಶೇಷ ಹಾಗೂ ಉನ್ನತ ಸ್ಥಾನ ತಂದುಕೊಡಲು ಈ ಹಿಂದೆಯೂ ಶ್ರಮಿಸಲಾಗಿದ್ದು, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿಯೂ ವಿಶೇಷ ಸಾಧನೆ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. ಇದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಶ್ರಮಿಸುವುದಾಗಿ ಹೇಳಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಸಂಘಗಳು, ದೈಹಿಕ ಶಿಕ್ಷಣ ಮತ್ತು ಚಿತ್ರಕಲಾ ಶಿಕ್ಷಕರ ಸಂಘಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಂಘಗಳು ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಸೇರಿದಂತೆ ಎಲ್ಲಾ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮುಖ್ಯ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ತಮ್ಮ ಸೇವಾ ಅವಧಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದಾಗ ಶಿಕ್ಷಕರು, ಮುಖ್ಯೋಪಾಧ್ಯಾಯರು, ಸಂಘಟನೆಗಳು ಹಾಗೂ ಪತ್ರಿಕಾ ಮಾಧ್ಯಮದವರು ನೀಡಿದ ಸಹಕಾರವನ್ನು ಸ್ಮರಿಸಿದರು. ಕಳೆದ ಎರಡು ವರ್ಷಗಳಿಂದ ಎರಡು ಕಡೆ ಪ್ರಭಾರ ಜವಾಬ್ದಾರಿ ಇದ್ದ ಕಾರಣ ಹೆಚ್ಚಿನ ಒತ್ತು ನೀಡಲು ಸಾಧ್ಯವಾಗುತ್ತಿರಲಿಲ್ಲ.ಆದರೆ ಈಗ ಒಂದೇ ತಾಲೂಕಿನ ಜವಾಬ್ದಾರಿ ಇರುವುದರಿಂದ ಶಾಲೆಗಳು ಹಾಗೂ ಶಿಕ್ಷಕರಿಗೆ ನಿರಂತರವಾಗಿ ಮಾರ್ಗದರ್ಶನ ನೀಡಲು ಸಾಧ್ಯವಾಗಲಿದೆ ಎಂದು ಪ್ರಭಾವತಿ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

Tags:

error: Content is protected !!