ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವುದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಸರ್ಕಾರವೇ ಜನರ ಮನೆಬಾಗಿಲಿಗೆ ಬಂದು ಸಮಸ್ಯೆಗಳನ್ನು ಆಲಿಸಿ, ವಿವಿಧ ಇಲಾಖೆಗಳ ಅಧಿಕಾರಿಗಳ ಮೂಲಕ ಪರಿಹಾರ ಒದಗಿಸುವುದು ಈ ಅಭಿಯಾನದ ವಿಶೇಷತೆಯಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಶನಿವಾರ ಉಗಾರ ಖುರ್ದ್ ಪಟ್ಟಣದ ಶ್ರದ್ಧಾ ಮಂಗಲ ಸಭಾಭವನದಲ್ಲಿ ಕಾಗವಾಡ ತಾಲೂಕು ಆಡಳಿತದ ವತಿಯಿಂದ ಶಾಸಕ ರಾಜು ಕಾಗೆ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾರ್ವಜನಿಕರು ತಮ್ಮ ಗ್ರಾಮ ಹಾಗೂ ಪಟ್ಟಣಗಳಲ್ಲಿರುವ ಸಮಸ್ಯೆಗಳನ್ನು ಸಭೆಯಲ್ಲಿ ಅಧಿಕಾರಿಗಳ ಗಮನಕ್ಕೆ ತರಬೇಕು. ಅಧಿಕಾರಿಗಳು ಜನರ ಪ್ರಶ್ನೆಗಳಿಗೆ ಸಮರ್ಪಕವಾಗಿ ಸ್ಪಂದಿಸಿ, ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಸೂಚಿಸಿದರು.
ಕಾಗವಾಡ ತಹಸೀಲ್ದಾರ್ ರವೀಂದ್ರ ಹಾದಿಮನಿ ಮಾತನಾಡಿ, ರಾಜ್ಯ ಸರ್ಕಾರದ ಈ ವಿಶೇಷ ಅಭಿಯಾನದ ಉದ್ದೇಶ ಮತ್ತು ಮಹತ್ವದ ಕುರಿತು ಮಾಹಿತಿ ನೀಡಿದರು. ಸಾರ್ವಜನಿಕರು ತಮ್ಮ ವೈಯಕ್ತಿಕ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ವಾಲಿ ಮಾತನಾಡಿ, ರಾಜ್ಯ ಸರ್ಕಾರವು ಹೊಸದಾಗಿ ಘೋಷಿಸಿರುವ ಭೂ ಗ್ಯಾರಂಟಿ ಯೋಜನೆ ಹಾಗೂ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಮೀನುಗಳಲ್ಲಿ ವಾಸಿಸುತ್ತಿರುವ ಜನರಿಗೆ ಆಸ್ತಿ ಸತ್ವ ದಾಖಲೆ ಒದಗಿಸುವ ವಿಶೇಷ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಅರ್ಹರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಗಾರ ಪಟ್ಟಣದ ಸಾರ್ವಜನಿಕರು ಹಾಗೂ ಯುವಕರು ಪಟ್ಟಣದ ವಿವಿಧ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಅಮೃತ್-2 ಯೋಜನೆಯಡಿ ರಸ್ತೆಗಳನ್ನು ಅಗೆದು ಗುಂಡಿಗಳನ್ನು ಹಾಗೆಯೇ ಬಿಡಲಾಗಿದೆ. ಅವುಗಳನ್ನು ಮುಚ್ಚುವ ಕಾಮಗಾರಿ ಪೂರ್ಣಗೊಂಡಿಲ್ಲ. ಪುರಸಭೆಯ ಹಲವು ಅಭಿವೃದ್ಧಿ ಕಾಮಗಾರಿಗಳು ಅಪೂರ್ಣವಾಗಿವೆ. ಸಾರ್ವಜನಿಕರ ಅನುಕೂಲಕ್ಕಾಗಿ ಶೌಚಾಲಯ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟರು.
ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕ ರಾಜು ಕಾಗೆ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿದರು. ಉಳಿದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪುರಸಭೆಯ ಮುಖ್ಯಾಧಿಕಾರಿ ಮಹಾಂತೇಶ ಕೊಲ್ಲಾಪುರ ಅವರಿಗೆ ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವಂತೆ ಸೂಚಿಸಿದರು.
ಕಾರ್ಯಕ್ರಮಕ್ಕೆ ಪುರಸಭೆ ಅಧ್ಯಕ್ಷೆ ಫಾತಿಮಾ ನದಾಫ್ ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಉಪಾಧ್ಯಕ್ಷ ಸತೀಶ ಜಗತಾಪ್, ಪುರಸಭೆ ಸದಸ್ಯರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸಂಜೀವಕುಮಾರ ಸದಲಗೆ, ಭೂಮಾಪನ ಇಲಾಖೆ ಅಧಿಕಾರಿ ಚೇತನಕುಮಾರ, ಎ.ಜೆ. ಶೇಖ, ಪಿಎಸ್ಐ ರಾಘವೇಂದ್ರ ಖೋತ, ಪ್ರಶಾಂತ ಪೋತದಾರ, ಪಿ.ಡಿ. ಮದಭಾವಿ, ಪ್ರವೀಣ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಕೊಲ್ಲಾಪುರ ಅವರು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಡಿ. ಮದಭಾವಿ ಕಾರ್ಯಕ್ರಮ ನಿರೂಪಿಸಿದರು.
