ಕಾಂಗ್ರೆಸ್ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಬಿಜೆಪಿ ಇಂದು ರಾಜಧಾನಿಯ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಗ್ಯಾರಂಟಿ ನೀಡಿದ ಕಾಂಗ್ರೆಸ್ ಈಗ ‘ಬೆಲೆ ಏರಿಕೆ’ಯನ್ನೇ ತನ್ನ 6ನೇ ಗ್ಯಾರಂಟಿಯನ್ನಾಗಿ ಜನರಿಗೆ ನೀಡಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಆಯೋಜಿಸಿದ್ದ ಬೃಹತ್ ಧರಣಿ ಸತ್ಯಾಗ್ರಹದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು ಹಾಗೂ ಪದಾಧಿಕಾರಿಗಳು ಭಾಗವಹಿಸಿ ಸರ್ಕಾರದ ವಿರುದ್ಧ ಜನವಿರೋಧಿ ಘೋಷಣೆಗಳನ್ನು ಕೂಗಿದರು. ದೀಪಾವಳಿ ಹಬ್ಬದ ಬೆನ್ನಲ್ಲೇ ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಹೆಚ್ಚಳ ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು, ಈ ಹಾಲಿನ ದರ ಏರಿಕೆಯ ಹೆಚ್ಚುವರಿ ಹೊರೆಯನ್ನು ಸಾರ್ವಜನಿಕರ ಮೇಲೆ ಹಾಕದೆ ರಾಜ್ಯ ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸಿದರು. ಹೈಕೋರ್ಟ್ ಕೂಡ ಸರ್ಕಾರಕ್ಕೆ ಛಾಟಿ ಬೀಸಿದ್ದು, ಪರಿಹಾರ ವಿತರಣೆಯಲ್ಲೂ ಕಾಂಗ್ರೆಸ್ ಸರ್ಕಾರ ಕನ್ನ ಹಾಕುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.
ರಾಜ್ಯದಲ್ಲಿ ಬಡವರು ಕಣ್ಣೀರಿನಲ್ಲಿ ಕೈತೊಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದ ವಿಜಯೇಂದ್ರ, ಮುಖ್ಯಮಂತ್ರಿಗಳನ್ನು ಉದ್ದೇಶಿಸಿ “ಇನ್ನು ಮುಂದೆ ನಿಮ್ಮ ಆಟ ನಡೆಯುವುದಿಲ್ಲ” ಎಂದು ಎಚ್ಚರಿಸಿದರು. ರಾಜ್ಯದಲ್ಲಿ ಮುಂದಕ್ಕೆ ಯಾವಾಗ ಚುನಾವಣೆ ನಡೆದರೂ ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ಸಾರ್ವಜನಿಕರು ನಿರ್ಧರಿಸಿದ್ದಾರೆ. ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳ ಜೊತೆಗೆ ಬೆಲೆ ಏರಿಕೆಯೇ ಅವರ 6ನೇ ಗ್ಯಾರಂಟಿಯಾಗಿದೆ. ಈ ಬಾರಿಯ ರಾಜ್ಯದ ಜನತೆ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವನ್ನು ಅಧಿಕಾರಕ್ಕೆ ತರುವ ಮೂಲಕ ಕಾಂಗ್ರೆಸ್ಗೆ ಸೂಕ್ತ ಉತ್ತರ ಅಥವಾ 7ನೇ ಗ್ಯಾರಂಟಿಯನ್ನು ನೀಡಲಿದ್ದಾರೆ ಎಂದು ಗುಡುಗಿದರು.
