Belagavi

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನಮ್ಮ ಗುರಿ: ಸಚಿವ ಸತೀಶ್ ಜಾರಕಿಹೊಳಿ

Share

ಗ್ರಾಮೀಣ ಪ್ರದೇಶದ ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಕ್ಷೇತ್ರದಲ್ಲಿ ಶಿಕ್ಷಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಬಡ್ರ್ಯಾನೂರ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಸುಮಾರು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಮುರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿ ಮಾತನಾಡಿದ ಅವರು, ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಾಗ ಮಾತ್ರ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ. ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿ ಶಿಕ್ಷಣಕ್ಕೆ ಅಡ್ಡಿಯಾಗಬಾರದು. ಈ ನಿಟ್ಟಿನಲ್ಲಿ ಸರ್ಕಾರ ವಿವಿಧ ಶೈಕ್ಷಣಿಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಬಡ್ರ್ಯಾನೂರ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಈ ವಸತಿ ಶಾಲೆಯಿಂದ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳು ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ವಸತಿ ಸಹಿತ ಶಿಕ್ಷಣ ಪಡೆಯಲು ಉತ್ತಮ ಅವಕಾಶ ದೊರೆಯಲಿದೆ. 6ನೇ ತರಗತಿಯಿಂದ 12ನೇ ತರಗತಿವರೆಗೆ ಶಿಕ್ಷಣ ಪಡೆಯಲು ಅವಕಾಶವಿದ್ದು, ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಯಮಕನಮರಡಿ ಮತಕ್ಷೇತ್ರದಲ್ಲಿ ಶಿಕ್ಷಣ, ರಸ್ತೆ, ಕುಡಿಯುವ ನೀರು ಸೇರಿದಂತೆ ಜನರ ಮೂಲಭೂತ ಅಗತ್ಯಗಳಿಗೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಅಭಿವೃದ್ಧಿ ಎನ್ನುವುದು ಕೇವಲ ಕಟ್ಟಡ ನಿರ್ಮಾಣಕ್ಕೆ ಸೀಮಿತವಾಗದೆ ಜನರ ಜೀವನಮಟ್ಟ ಸುಧಾರಿಸುವಂತಿರಬೇಕು. ಈ ಆಶಯದೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುತ್ತಿದೆ. ಇನ್ನು 18 ಕೋಟಿ ರೂ. ವೆಚ್ಚದ ಈ ವಸತಿ ಶಾಲೆಯು ಮುಂದಿನ ದಿನಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಸಚಿವರು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ವಿಜಯ ಪ್ರಕಾಶ, ಸಚಿವರ ಆಪ್ತ ಸಹಾಯಕ ಅರವಿಂದ ಕಾರ್ಚಿ, ಯಲ್ಲಪ್ಪ ಗೂಡರಿ, ಬಸವಜಾರ ನಾಯಕ, ಯಲ್ಲಪ್ಪ ತಲ್ಲೂರಿ, ಬಾಳೇಶ ಕೂರಬರ್ ಸೇರಿದಂತೆ ಲೋಕೋಪಯೋಗಿ ಇಲಾಖೆ ಹಾಗೂ ಹೌಸಿಂಗ್ ಬೋರ್ಡ್ ಅಧಿಕಾರಿಗಳು, ಬಡ್ರ್ಯಾನೂರ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:

error: Content is protected !!