ಬೆಳಗಾವಿ ಜಿಲ್ಲೆಯಲ್ಲಿ ಪಡಿತರ ವಿತರಣೆ ವೇಳೆ ಎದುರಾಗುತ್ತಿರುವ ಸರ್ವರ್ ಸಮಸ್ಯೆಯಿಂದ ನ್ಯಾಯಬೆಲೆ ಅಂಗಡಿ ಮಾಲಿಕರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಘದ ಪ್ರತಿನಿಧಿಗಳು ಇಂದು ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಪಡಿತರ ಎತ್ತುವಳಿ ತಡವಾಗಿ ಆರಂಭವಾಗಿದ್ದು, ಇದರ ಬೆನ್ನಲ್ಲೇ ತೀವ್ರ ಸರ್ವರ್ ಸಮಸ್ಯೆ ಎದುರಾಗಿರುವುದರಿಂದ ನಾಗರಿಕರಿಗೆ ದವಸ ಧಾನ್ಯ ಹಂಚಿಕೆ ಮಾಡಲು ಭಾರೀ ತೊಂದರೆಯಾಗುತ್ತಿದೆ ಎಂದು ಬೆಳಗಾವಿ ಜಿಲ್ಲೆ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲಿಕರ ಸಂಘದ ಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಸರ್ವರ್ ಸಂಪೂರ್ಣ ಬಂದ್ ಆಗಿದ್ದಲ್ಲದೆ, ಪ್ರತಿನಿತ್ಯದ ಈ ಸಮಸ್ಯೆಯಿಂದ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತಿದೆ. ರಾಜ್ಯಾದ್ಯಂತ ಕಾಡುತ್ತಿರುವ ಈ ಸಮಸ್ಯೆಯನ್ನು ಸರ್ಕಾರ ಯುದ್ಧೋಪಾದಿಯಲ್ಲಿ ಬಗೆಹರಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಹಾಗೂ ಆಹಾರ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಅಧಿಕಾರ ಸ್ವೀಕರಿಸಿ ಎರಡು ತಿಂಗಳಾಗಿದ್ದು, ಬಂದಾಗಿನಿಂದಲೇ ಇಂತಹ ಕಿರಿಕಿರಿ ಉಂಟಾಗುತ್ತಿದೆ ಎಂದು ಸಂಘದ ಪದಾಧಿಕಾರಿಗಳು ಗಮನ ಸೆಳೆದಿದ್ದಾರೆ. ಹಿಂದುಳಿದ, ಅಲ್ಪಸಂಖ್ಯಾತ ಸಮಾಜಕ್ಕೆ ಸೇರಿದ ಸಚಿವರ ಹೆಸರಿಗೆ ಕಳಂಕ ತರಲು ಐಟಿ ಸೆಕ್ಷನ್ ಅಥವಾ ಮೇಲಾಧಿಕಾರಿ ಮಟ್ಟದಲ್ಲಿ ಏನಾದರೂ ಷಡ್ಯಂತ್ರ ನಡೆಯುತ್ತಿದೆಯೇ ಎಂಬುದನ್ನು ಸಚಿವರು ಗಮನಿಸಬೇಕು ಎಂದು ಸಂಶಯ ವ್ಯಕ್ತಪಡಿಸಿದ್ದು, ಸರ್ವರ್ ಸಮಸ್ಯೆ ಕೂಡಲೇ ಸರಿಪಡಿಸದಿದ್ದರೆ ಜಿಲ್ಲಾದ್ಯಂತ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ನ್ಯಾಯಬೆಲೆ ಅಂಗಡಿಯ ಮಾಲೀಕರು ಭಾಗಿಯಾಗಿದ್ಧರು.
