Belagavi

ಚಳಿಗಾಲದ ಅಧಿವೇಶನಕ್ಕೂ ಮುನ್ನ ಸುವರ್ಣಸೌಧದ ಸುತ್ತಮುತ್ತ ಭರದ ರಸ್ತೆ ಡಾಂಬರೀಕರಣ: ಹಲಗಾ ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ

Share

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಆಡಳಿತ ಯಂತ್ರದಿಂದ ಭರದ ಸಿದ್ಧತೆ ಆರಂಭವಾಗಿದೆ. ಅಧಿವೇಶನಕ್ಕೂ ಮುನ್ನ ಹೆದ್ದಾರಿ ರಸ್ತೆಗಳ ದುರಸ್ತಿ ಹಾಗೂ ಡಾಂಬರೀಕರಣ ಕಾಮಗಾರಿ ಭರದಿಂದ ಸಾಗಿದ್ದು, ವಾಹನ ಸಂಚಾರ ಮಾರ್ಗ ಬದಲಾವಣೆಯಿಂದ ಹಲಗಾ ಸರ್ವಿಸ್ ರಸ್ತೆಯಲ್ಲಿ ಟ್ರಾಫಿಕ್ ಕಿರಿಕಿರಿ ಎದುರಾಗಿದೆ.

ಬೆಳಗಾವಿ: ಕರ್ನಾಟಕ ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಡಳಿತದಿಂದ ರಸ್ತೆ ದುರಸ್ತಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಳ್ಳಲಾಗಿದೆ. ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಗಣ್ಯರ ಸುಗಮ ಸಂಚಾರಕ್ಕಾಗಿ ಸುವರ್ಣ ವಿಧಾನಸೌಧ ಸುತ್ತಮುತ್ತಲಿನ ಹೆದ್ದಾರಿಯ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಕ್ಕೆ ವೇಗ ನೀಡಲಾಗಿದೆ.

ಇನ್ನು ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದ್ದು, ಬೆಳಗಾವಿಯಿಂದ ಬರುವ ಹೆದ್ದಾರಿ ವಾಹನಗಳನ್ನು ಹಲಗಾ ಗ್ರಾಮದ ಸರ್ವಿಸ್ ರಸ್ತೆ ಮೂಲಕ ಬಾಗೇವಾಡಿ ಕಡೆಗೆ ತಿರುಗಿಸಲಾಗಿದೆ. ಇದರಿಂದಾಗಿ ಹಲಗಾ ಸರ್ವಿಸ್ ರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿ ಪದೇ ಪದೇ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ವಾಹನ ಸವಾರರು ಹಾಗೂ ಸ್ಥಳೀಯರು ಪರದಾಡುವಂತಾಗಿದೆ. ಅಧಿವೇಶನದ ಸಿದ್ಧತೆ ನಡುವೆಯೂ ಸಂಚಾರ ದಟ್ಟಣೆ ನಿಯಂತ್ರಿಸಲು ಹೆದ್ದಾರಿ ಸಂಚಾರಿ ಪೊಲೀಸರು ಹೆಚ್ಚಿನ ನಿಗಾ ವಹಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tags:

error: Content is protected !!