Vijaypura

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಎಂ.ಬಿ.ಪಾಟೀಲ

Share

ಮುಂಬರುವ ಬೇಸಿಗೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಯಾವುದೇ ಭಾಗದಲ್ಲೂ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಲಮಟ್ಟಿ ಜಲಾಶಯದಲ್ಲಿರುವ ನೀರಿನ ಸಂಗ್ರಹವನ್ನು ಮುಂದಿನ ಮಳೆಗಾಲದವರೆಗೆ ಸಮರ್ಪಕವಾಗಿ ನಿರ್ವಹಿಸುವುದು ಆದ್ಯತೆಯಾಗಿದೆ. ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯಯವಾಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಕೃಷಿ, ತೋಟಗಾರಿಕೆ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ, ಬಾಕಿ ಇರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ತುರ್ತಾಗಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಸಭೆಯಲ್ಲಿ ಸಮಗ್ರ ಚರ್ಚೆ ನಡೆಸಲಾಯಿತು.

ಬಾಕಿ ಇರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು. ಸರ್ಕಾರದ ಯೋಜನೆಗಳು ಹಾಗೂ ಸಾರ್ವಜನಿಕ ಸೇವೆಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಶಿವಾನಂದ ಪಾಟೀಲ, ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಜಿಲ್ಲಾಧಿಕಾರಿ ಡಾ. ಆನಂದ್ ಕೆ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!