State

“ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ ಪ್ರಗತಿ ಸಾಧ್ಯ” – ಗ್ರಾಮೀಣಾಭಿವೃದ್ಧಿ ಯೋಜನೆಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ

Share

“ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯವಿದ್ದು, ಗ್ರಾಮೀಣ ಬದುಕು ಉಳಿಸಲು ಸರ್ಕಾರ ಎಲ್ಲಾ ಸೌಕರ್ಯಗಳನ್ನು ನೀಡಲಿದೆ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಮತ್ತು ‘ಗ್ರಾಮೀಣಾಭಿವೃದ್ಧಿ ಯೋಜನೆ’ಗಳನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಉತ್ತಮ ಬದುಕು, ಉದ್ಯೋಗ ಹಾಗೂ ವಿದ್ಯಾಭ್ಯಾಸಕ್ಕಾಗಿ ಹಳ್ಳಿಗಳಿಂದ ಶೇ. 47ರಷ್ಟು ಜನಸಂಖ್ಯೆ ನಗರಕ್ಕೆ ವಲಸೆ ಹೋಗಿದ್ದು, ಮುಂದೆ ಇದು ಶೇ. 76ಕ್ಕೆ ಏರುವ ಸಾಧ್ಯತೆಯಿದೆ. ಹಳ್ಳಿಗಳಲ್ಲಿ ಕೇವಲ ತಂದೆ-ತಾಯಿ ಮಾತ್ರ ಉಳಿಯುವಂತಾಗಿದ್ದು, ಈ ವಲಸೆಯನ್ನು ತಪ್ಪಿಸಲು ಗ್ರಾಮೀಣ ಭಾಗಕ್ಕೆ ರಸ್ತೆ, ಕುಡಿಯುವ ನೀರು ಸೇರಿದಂತೆ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಲು ವಿಶೇಷ ಕಾಳಜಿ ವಹಿಸಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್‌ಗಳ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ ಎಂದು ಸಿಎಂ ಒತ್ತಿ ಹೇಳಿದರು. ರಾಜ್ಯದಿಂದ ಕೇಂದ್ರಕ್ಕೆ ಕಟ್ಟುವ ತೆರಿಗೆಯಲ್ಲಿ ಕೇವಲ ಶೇ. 17-18ರಷ್ಟು ಮಾತ್ರ ಮರಳಿ ಬರುತ್ತಿದ್ದು, ರೈತರ ವಿದ್ಯುತ್ ಬಾಬ್ತು 30 ಸಾವಿರ ಕೋಟಿ ರೂ. ಬಿಲ್ ಪಾವತಿಸಬೇಕಿದೆ. ಇಷ್ಟೆಲ್ಲಾ ಸವಾಲುಗಳ ನಡುವೆಯೂ ಅಂತರ್ಜಲ ಹೆಚ್ಚಿಸಲು ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಚಿವ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಶಾಸಕರಾದ ಎನ್.ಎಚ್.ಕೋನರೆಡ್ಡಿ, ರಹೀಮ್ ಖಾನ್, ಅಶೋಕ್ ಪಟ್ಟಣ್, ವೆಂಕಟಶಿವಾರೆಡ್ಡಿ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!