gokak

ಗೋಕಾಕದಲ್ಲಿ ತಂಬಾಕು ನಿಯಂತ್ರಣ ಅಧಿಕಾರಿಗಳ ದಾಳಿ –

Share

ತಂಬಾಕು ಉತ್ಪನ್ನಗಳ ಅಕ್ರಮ ಮಾರಾಟ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಕಡಿವಾಣ ಹಾಕಲು ಗೋಕಾಕದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಕೋಟ್ಪಾ ಕಾಯ್ದೆಯಡಿ 15 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ.

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ನವೆಂಬರ್ 18ರಂದು ಗೋಕಾಕ ತಾಲೂಕಿನಲ್ಲಿ ಕೋಟ್ಪಾ (COTPA) 2003 ಕಾಯ್ದೆಯಡಿ ವಿಶೇಷ ಕಾರ್ಯಾಚರಣೆ ನಡೆಸಲಾಯಿತು. ಜಿಲ್ಲಾ ಸರ್ವೇಕ್ಷಣ ಹಾಗೂ ತಂಬಾಕು ನಿಯಂತ್ರಣ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರು, ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಪ್ರದರ್ಶಿಸುವವರು ಮತ್ತು ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಯಿತು. ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವುದರ ಜೊತೆಗೆ ಕಾಯ್ದೆಯಡಿ 15 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಡಾ. ಶ್ವೇತಾ ಪಾಟೀಲ್, ಸಮಾಜ ಸೇವಕಿ ಕವಿತಾ ರಾಜಣ್ಣವರ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಬಿ.ಬಿ. ಈಶ್ವರಪ್ಪಗೋಳ, ಬಾಬು ಶೆಟ್ಟಪ್ಪನವರ, ಈರಣ್ಣ ತೋರಗಲ ಹಾಗೂ ಪೊಲೀಸ್ ಇಲಾಖೆಯ ಜಿ.ವಿ. ರಾಥೋಡ ಉಪಸ್ಥಿತರಿದ್ದರು.

Tags:

error: Content is protected !!