ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ರೈತರ ಬಹುದಿನಗಳ ನಿರೀಕ್ಷೆಯಾಗಿದ್ದ ನಾಗರಬೆಟ್ಟ ಏತ ನೀರಾವರಿ ಯೋಜನೆಯ ಪ್ರಾಯೋಗಿಕ ನೀರು ಹರಿಸುವಿಕೆ (ಟ್ರಯಲ್ ರನ್) ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಶಾಸಕ ಅಪ್ಪಾಜಿ ನಾಡಗೌಡ ಅವರು, ನಿನ್ನೆ ಸಂಜೆ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಹಾಗೂ ಸ್ಥಳೀಯ ರೈತರೊಂದಿಗೆ ಸಮಾಲೋಚನೆ ನಡೆಸಿ, ಆದಷ್ಟು ಬೇಗ ಟ್ರಯಲ್ ರನ್ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು ಎಂದು ತಿಳಿಸಿದ್ದಾರೆ. ಶಾಸಕರ ಸೂಚನೆಯಂತೆ ಕೃಷ್ಣಾ ಭಾಗ್ಯ ಜಲ ನಿಗಮದ ಅಧಿಕಾರಿಗಳು ಹಾಗೂ ತಂತ್ರಜ್ಞರ ತಂಡ ನಿರಂತರವಾಗಿ ಶ್ರಮಿಸಿ ಒಂದೇ ದಿನದಲ್ಲಿ ಟ್ರಯಲ್ ರನ್ ಯಶಸ್ವಿಗೊಳಿಸಿದೆ. ಈ ಕುರಿತು ಅಧಿಕಾರಿಗಳೊಂದಿಗೆ ಮತ್ತಷ್ಟು ಚರ್ಚಿಸಿ, ಸಮಗ್ರ ವರದಿ ಸಿದ್ಧಪಡಿಸಲಾಗುವುದು. ಬಳಿಕ ಕರ್ನಾಟಕದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಆದಷ್ಟು ಬೇಗ ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅಪ್ಪಾಜಿ ನಾಡಗೌಡ ತಿಳಿಸಿದ್ದಾರೆ.

