State

ಸಂಪುಟಕ್ಕೆ ಮತ್ತೇ ಲಕ್ಷ್ಮೀ ಹೆಬ್ಬಾಳ್ಕರ್ ಎಂಟ್ರಿ?

Share

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಪುಟ ವಿಸ್ತರಣೆಯ ಸದ್ದು ಜೋರಾಗಿದೆ. ಡಿಸೆಂಬರ್ ಮೊದಲ ವಾರದ ಬಳಿಕ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ ಖಾಲಿ ಇರುವ ಒಂದು ಸಚಿವ ಸ್ಥಾನವನ್ನು ತುಂಬಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮತ್ತೆ ಅದೃಷ್ಟ ಖುಲಾಯಿಸುವ ಸಾಧ್ಯತೆ ದಟ್ಟವಾಗಿದೆ.

ಜೂನ್‌ನಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ 33 ಸದಸ್ಯ ಬಲದ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಸಚಿವರಿಲ್ಲದಿರುವುದು ವಿಪಕ್ಷಗಳು ಹಾಗೂ ಸ್ವಪಕ್ಷೀಯರ ಟೀಕೆಗೆ ಗುರಿಯಾಗಿತ್ತು. ಹೀಗಾಗಿ, ಅಧಿವೇಶನಕ್ಕೂ ಮುನ್ನ ಮಹಿಳಾ ಶಾಸಕಿಯೊಬ್ಬರಿಗೆ ಸಚಿವ ಸ್ಥಾನ ನೀಡಲು ಸಿಎಂ ಡಿಕೆಶಿ ಒಲವು ತೋರಿದ್ದು, ತಮ್ಮ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಮತ್ತು ಉತ್ತರ ಕರ್ನಾಟಕದಲ್ಲಿ ಪ್ರಬಲ ಸಂಘಟನಾ ಶಕ್ತಿ ಹೊಂದಿರುವ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಹೈಕಮಾಂಡ್ ಮೇಲೆ ತೀವ್ರ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದಲ್ಲಿ ಬೇರೆ ಜಾತಿ ಸಮೀಕರಣದ ದಾಳ ಉರುಳಿಸಿದ್ದಾರೆ. ಹಿಂದುಳಿದ ವರ್ಗಗಳ ಪ್ರಾತಿನಿಧ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಬದಲಿಗೆ ಕುರುಬ ಸಮುದಾಯದ ನಾಯಕರೊಬ್ಬರಿಗೆ ಸಚಿವ ಸ್ಥಾನ ನೀಡುವಂತೆ ಸಿದ್ದರಾಮಯ್ಯ ಹೈಕಮಾಂಡ್ ಬಳಿ ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ನಲ್ಲಿ ನಡೆದ ಸಂಪುಟ ಪುನಾರಚನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಕಳೆದುಕೊಂಡಿದ್ದ ಹೆಬ್ಬಾಳ್ಕರ್ ಅವರಿಗೆ ಮತ್ತೆ ಮಂತ್ರಿಗಿರಿ ಸಿಗುತ್ತದೆಯೇ ಅಥವಾ ಸಿದ್ದರಾಮಯ್ಯನವರ ತಂತ್ರಕ್ಕೆ ಹೈಕಮಾಂಡ್ ಮಣೆ ಹಾಕುತ್ತದೆಯೇ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Tags:

error: Content is protected !!