ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸರ್ಕಾರ ರಚನೆಯಾದ 100 ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಸವ, ಗಾಂಧಿ, ಅಂಬೇಡ್ಕರ್ ತತ್ವದಡಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಚಿವರು, ಏಕಕಾಲದಲ್ಲಿ ರಾಜ್ಯದಲ್ಲಿ 13 ಸಾವಿರ ಕಡೆ ಯೋಜನೆಗೆ ಚಾಲನೆ ಸಿಗಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರಥ್ಯದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳಿವೆ. ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕ ಬಳಿಕ ಇಲಾಖೆಯ ಕೆಲಸ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಬುಧವಾರ ನಡೆಯಲಿರುವ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಇದಕ್ಕೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹೆಚ್ಚಿನ ಪಾತ್ರ ವಹಿಸಬೇಕು ಚಾಮರಾಜನಗರದಲ್ಲಿ ಅತಿಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಶ್ರಮ ಸಾಕಷ್ಟಿದೆ ಎಂದು ಸಚಿವರು ಹೇಳಿದರು. ಈ ವೇಳೆ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.