ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗಿದ್ದು, ಕೇಂದ್ರದ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ ಹೊರಹಾಕಲಾಯಿತು.


ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರನ್ನು ಬದಲಿಸುವ ಕೇಂದ್ರ ಸರ್ಕಾರದ ನಿರ್ಧಾರ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಮಹಾಪುರುಷರ ಹೆಸರನ್ನು ತೆಗೆದುಹಾಕುವುದು ಅವಮಾನಕಾರಿಯಾದ ಸಂಗತಿ ಎಂದು ನಾಯಕರು ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆ ಜಿಲ್ಲಾಡಳಿತ ಭವನದ ಆವರಣದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ತಕ್ಷಣವೇ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಬೀಳಗಿ ಶಾಸಕ ಜೆ.ಟಿ. ಪಾಟೀಲ್, ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹಾಗೂ ಮಾಜಿ ಸಚಿವ ಅಜಯ್ಕುಮಾರ್ ಸರ್ನಾಯಕ್ ಸೇರಿದಂತೆ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿದ್ದರು. ಕೇಂದ್ರ ಸರ್ಕಾರ ಜನವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ವಾಗ್ದಾಳಿ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
