ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಬಳಿ ಮೊನ್ನೆಯಷ್ಟೇ ಪತ್ತೆಯಾಗಿದ್ದ ಯುವಕನ ಶವದ ರಹಸ್ಯ ಈಗ ಬಯಲಾಗಿದೆ. ಹೈ ಟೆನ್ಶನ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನ ಸಾವು ಆತ್ಮಹತ್ಯೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತ ಯುವಕ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದು, ಕುಟುಂಬದಲ್ಲಿನ ಕಲಹವೇ ಈ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.

ಮೊನ್ನೆಯಷ್ಟೇ ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾದಾಗ ಹಲವು ಶಂಕೆಗಳು ವ್ಯಕ್ತವಾಗಿದ್ದವು. ಆದರೆ ಸ್ಥಳದಲ್ಲಿ ಸಿಕ್ಕಿರುವ ಡೆತ್ ನೋಟ್ ಎಲ್ಲವನ್ನೂ ಸ್ಪಷ್ಟಪಡಿಸಿದೆ. ಬೆಳಗಾವಿ ಜಿಲ್ಲೆಯ ಕೊಕಟನೂರು ಗ್ರಾಮದ ನಿವಾಸಿ, 24 ವರ್ಷದ ಮಹೇಶ್ ಮಾದರ ಎಂಬ ಯುವಕ ಹೈ ಟೆನ್ಶನ್ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. “ಜೀವನದಲ್ಲಿ ಜಿಗುಪ್ಸೆ ಹೊಂದಿದ್ದೇನೆ ಮತ್ತು ಕೌಟುಂಬಿಕ ಸಮಸ್ಯೆಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ” ಎಂದು ಮಹೇಶ್ ಡೆತ್ ನೋಟ್’ನಲ್ಲಿ ಉಲ್ಲೇಖಿಸಿದ್ದಾನೆ. ಮೃತನ ಪೋಷಕರು ನೀಡಿದ ದೂರಿನ ಮೇರೆಗೆ ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
