ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಹಾವಳಿ ಮಿತಿಮೀರಿದ್ದು, ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ನಡೆದ ದರೋಡೆ ಯತ್ನ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಮಧ್ಯರಾತ್ರಿ ಸುಮಾರು 2 ಗಂಟೆಯ ಸುಮಾರಿಗೆ ಸವದತ್ತಿ-ಗೋಕಾಕ ಮುಖ್ಯ ರಸ್ತೆಯಲ್ಲಿರುವ ಬ್ಯಾಂಕ್‌ಗೆ ನುಗ್ಗಿದ ಚಾಲಾಕಿ ಕಳ್ಳನೊಬ್ಬ, ಹಿಂಬದಿಯ ಕಬ್ಬಿಣದ ಕಿಟಕಿಯನ್ನು ಕಟ್ ಮಾಡಿ ಒಳಪ್ರವೇಶಿಸಿದ್ದಾನೆ. ಮುಖಕ್ಕೆ ಮಾಸ್ಕ್ ಧರಿಸಿದ್ದ ಈತ ಬ್ಯಾಂಕ್ ಲೂಟಿಗೆ ಮುಂದಾದ ಕ್ಷಣದಲ್ಲೇ ಎಚ್ಚರಿಕೆ ಗಂಟೆ (ಸೈರನ್) ಮೊಳಗಿದ್ದರಿಂದ ಗಾಬರಿಗೊಂಡು ಸ್ಥಳದಿಂದ ಕಾಲ್ಕಿತ್ತಿದ್ದಾನೆ. ಇದರಿಂದಾಗಿ ಬ್ಯಾಂಕಿನಲ್ಲಿದ್ದ ಲಕ್ಷಾಂತರ ರೂಪಾಯಿ ಹಣ ಹಾಗೂ ಬೆಲೆಬಾಳುವ ವಸ್ತುಗಳು ಕೂದಲೆಳೆ ಅಂತರದಲ್ಲಿ ದರೋಡೆಯಿಂದ ಪಾರಾದಂತಾಗಿದೆ.
ಈ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಡಿವೈಎಸ್ಪಿ ಚಿದಂಬರ ಮಡಿವಾಳರ, ಸಿಪಿಐ ಸುರೇಶ್ ಬೆಂಡೆಗುಂಬಳ ಹಾಗೂ ಸವದತ್ತಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳ್ಳನ ಪತ್ತೆಗೆ ಜಾಲ ಬೀಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಬರಿಗೈಲಿ ವಾಪಸ್ಸಾದ ಕಳ್ಳನಿಗಾಗಿ ಪೊಲೀಸರು ತೀವ್ರ ಶೋಧ ಕಾರ್ಯ ಮುಂದುವರಿಸಿದ್ದಾರೆ.

