ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಗಂಗಾಮತಸ್ಥರ ಸಂಘದ ಸಭೆಯ ವೇಳೆ ಭಾರಿ ಹೈಡ್ರಾಮಾ ನಡೆದಿದ್ದು, ಸಭೆಯ ಗಲಾಟೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಸಂಘದ 2021 ರಿಂದ 2023ರ ವರೆಗಿನ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಆಯ್ಕೆ ಪ್ರಕ್ರಿಯೆ ಕುರಿತು ಈಗಾಗಲೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ಅಧ್ಯಕ್ಷರ ಆಯ್ಕೆಗೆ ಅವಕಾಶ ನೀಡಬಾರದು ಎಂದು ಶಿವು ಕೋಲಕಾರ್ ಹಾಗೂ ಕಾರ್ಯದರ್ಶಿ ಮಲ್ಲಿಕಾರ್ಜುನ ಬಾಜಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಇದನ್ನು ಲೆಕ್ಕಿಸದೆ ಹಿರಿಯ ಮುಖಂಡ ಮಲ್ಲಪ್ಪ ಮುರಗೋಡ ನೇತೃತ್ವದಲ್ಲಿ ಸಭೆ ನಡೆಸುತ್ತಿದ್ದಾಗ ಎರಡು ಗುಂಪುಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದು ಗಲಾಟೆ ವಿಕೋಪಕ್ಕೆ ಹೋಗಿದೆ.
ಗಲಾಟೆಯ ಸಂದರ್ಭದಲ್ಲಿ ಹಿರಿಯ ಮುಖಂಡ ಮಲ್ಲಪ್ಪ ಮುರಗೋಡ ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಶಿವು ಕೋಲಕಾರ್ ಆರೋಪಿಸಿದ್ದು, ಈ ವೇಳೆ ನಡೆದ ಸಂಘರ್ಷದಲ್ಲಿ ಶಿವು ಸೇರಿದಂತೆ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶೇಷವೆಂದರೆ, ಪೊಲೀಸರ ಸಮ್ಮುಖದಲ್ಲೇ ಕೈಯಲ್ಲಿ ಗನ್ ಹಿಡಿದುಕೊಂಡಿರುವ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಹಿತಕರ ಘಟನೆ ನಡೆದಿದೆ.

