ಖಾನಾಪುರ ತಾಲೂಕಿನ ಗರ್ಲಗುಂಜಿ ಭಾಗದ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಸಾರ್ವಜನಿಕರು ಎದುರಿಸುತ್ತಿದ್ದ ಸಾರಿಗೆ ಸಮಸ್ಯೆಗೆ ಕೊನೆಗೂ ಪರಿಹಾರ ಸಿಕ್ಕಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಸೂರ್ಯಕಾಂತ ಕುಲಕರ್ಣಿ ಅವರ ವಿಶೇಷ ಪ್ರಯತ್ನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದ ಫಲವಾಗಿ ಗರ್ಲಗುಂಜಿ–ಬೆಳಗಾವಿ ನಡುವೆ ಬೆಳಗಿನ ಬಸ್ ಸೇವೆ ಪುನರಾರಂಭಗೊಂಡಿದೆ.

ಈ ಹಿಂದೆ ಬೆಳಿಗ್ಗೆ 8 ಗಂಟೆಗೆ ಉದ್ಯಮಬಾಗ್ ಮತ್ತು ಬೆಳಗಾವಿಗೆ ಹೋಗಲು ಸರಿಯಾದ ಬಸ್ ವ್ಯವಸ್ಥೆ ಇಲ್ಲದೆ ಕಾರ್ಮಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಸಂಕಷ್ಟ ಅನುಭವಿಸುತ್ತಿದ್ದರು. ಈ ಗಂಭೀರ ಸಮಸ್ಯೆಯನ್ನು ಮನಗಂಡ ಸೂರ್ಯಕಾಂತ ಕುಲಕರ್ಣಿ ಅವರು ಸಚಿವ ಸತೀಶ್ ಜಾರಕಿಹೊಳಿ ಅವರ ಮೂಲಕ ಇಲಾಖೆಯ ಮೇಲೆ ಒತ್ತಡ ಹೇರಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಸೇವೆಯಿಂದ ಬರಗಾವ್, ಭಂಡರಗಾಳಿ, ಸಣ್ಣಹೋಸೂರು, ನಿಡಗಲ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಅನುಕೂಲವಾಗಿದೆ. ಬಸ್ ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಪೂಜೆ ಸಲ್ಲಿಸಿ, ಸಿಬ್ಬಂದಿ ಹಾಗೂ ಸೂರ್ಯಕಾಂತ ಕುಲಕರ್ಣಿ ಅವರನ್ನು ಸನ್ಮಾನಿಸಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಲಿತಾ ಕೊಲ್ಕಾರ್, ಮಾಜಿ ಚೇರ್ಮನ್ ಗೋಪಾಳ್ ಪಾಟೀಲ್ ಹಾಗೂ ಇತರ ಗಣ್ಯರು, ನೂರಾರು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸಿದರು.
