ಖಾನಾಪುರ-ಲೋಂಡಾ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಧಿ ಅಟ್ಟಹಾಸ ಮೆರೆದಿದೆ. ಕಾರಿನ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ ಪರಿಣಾಮ ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಅತಿಯಾದ ರಕ್ತಸ್ರಾವದಿಂದ ಯುವಕನೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

ಖಾನಾಪುರ-ಲೋಂಡಾ ಹೆದ್ದಾರಿಯ ವಾಟರೆ ಗ್ರಾಮದ ಬಳಿ ಕಾರು ಮತ್ತು ಬೈಕ್ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ. ಬೆಳಗಾವಿಯಿಂದ ಗೋವಾಕ್ಕೆ ತೆರಳುತ್ತಿದ್ದ ಕಾರಿನ ಮುಂಭಾಗದ ಟೈರ್ ಏಕಾಏಕಿ ಸ್ಫೋಟಗೊಂಡ ಪರಿಣಾಮ, ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಗರ್ಲಗುಂಜಿ ಗ್ರಾಮದ ಗೌರೇಶ್ ಸುರೇಶ್ ಕುಂಬಾರ (34) ಅವರ ಕಾಲಿನ ರಕ್ತನಾಳ ತುಂಡಾಗಿ ತೀವ್ರ ರಕ್ತಸ್ರಾವವಾಗಿದ್ದು, ಅವರ ಸ್ನೇಹಿತ ಶಿವಾಜಿ ಪ್ರಕಾಶ ಲೋಹಾರ ಕೈ-ಕಾಲುಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಆಂಬ್ಯುಲೆನ್ಸ್ ಮೂಲಕ ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅಪಘಾತದ ಸ್ಥಳಕ್ಕೆ ಆಂಬ್ಯುಲೆನ್ಸ್ ಬರುವುದು ವಿಳಂಬವಾದ ಕಾರಣ ಹಾಗೂ ಅತಿಯಾದ ರಕ್ತಸ್ರಾವದಿಂದಾಗಿ ಗೌರೇಶ್ ಅವರು ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮತ್ತೊಬ್ಬ ಗಾಯಾಳು ಶಿವಾಜಿ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಕುರಿತು ಖಾನಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
