Accident

ಬಡೇಕೊಳ್ಳಮಠ ಬಳಿ ಸರಣಿ ಅಪಘಾತ; ತಪ್ಪಿದ ಭಾರಿ ಅನಾಹುತ, ಇಬ್ಬರಿಗೆ ಗಾಯ

Share

ಬೆಳಗಾವಿ ತಾಲೂಕಿನ ಬಡೇಕೊಳ್ಳಮಠ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಸರಣಿ ಅಪಘಾತ ಸಂಭವಿಸಿದೆ. ಬೃಹತ್ ವಾಹನಗಳ ನಡುವೆ ಡಿಕ್ಕಿ ಸಂಭವಿಸಿದರೂ ಸಹ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಭಾರಿ ದುರಂತವೊಂದು ತಪ್ಪಿದಂತಾಗಿದೆ.

ಬೆಳಗಾವಿ ತಾಲೂಕಿನ ಹಿರೇಬಾಗೆವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡೇಕೊಳ್ಳಮಠ ಬಳಿ ಈ ಘಟನೆ ನಡೆದಿದೆ. ಬಟ್ಟೆ ತುಂಬಿದ್ದ ಕಂಟೇನರ್ ವಾಹನಕ್ಕೆ ಮತ್ತೊಂದು ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಕಂಟೇನರ್ ರಸ್ತೆಯಲ್ಲೇ ಮುಗುಚಿ ಬಿದ್ದಿದೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಇಂಡಿಯನ್ ಆಯಿಲ್ ಸಂಸ್ಥೆಯ ತೈಲ ತುಂಬಿದ ವಾಹನವು ನಿಯಂತ್ರಣ ತಪ್ಪಿ ಸರ್ವೀಸ್ ರಸ್ತೆಯನ್ನು ದಾಟಿ, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಕ್ಕದ ಜಮೀನಿಗೆ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ತೈಲ ವಾಹನದ ಮುಂಭಾಗವು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತೈಲ ತುಂಬಿದ ವಾಹನ ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮೊಕ್ಕಾಂ ಹೂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಷಯ ತಿಳಿದ ತಕ್ಷಣ ಹಿರೇಬಾಗೆವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Tags:

error: Content is protected !!