ರಾಜ್ಯದಲ್ಲಿ ಬಜೆಟ್ ಅಧಿವೇಶನ ಮುಗಿದ ಬಳಿಕ ಕ್ಯಾಬಿನೆಟ್ ವಿಸ್ತರಣೆಗೆ ಅವಕಾಶ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಕುರಿತ ಅಂತಿಮ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ತಿಳಿಸಿದರು.

ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶದಿಂದ ಸುಮಾರು ಐವತ್ತರಷ್ಟು ಮಂತ್ರಿಗಳನ್ನು ಸಂಘಟನೆ ಕಾರ್ಯಕ್ಕೆ ನಿಯೋಜಿಸಬೇಕು ಎಂಬ ಮನವಿಯನ್ನು ಹೈಕಮಾಂಡ್‌ಗೆ ಸಲ್ಲಿಸಲಾಗಿದೆ. ಆ ಸ್ಥಾನಗಳನ್ನು ಹೊಸಬರಿಗೆ ನೀಡಬೇಕು ಎಂಬ ಅಭಿಪ್ರಾಯವೂ ಪಕ್ಷದೊಳಗೆ ಇದೆ ಎಂದರು. ಪಕ್ಷದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ ಎಂದು ಸ್ಪಷ್ಟಪಡಿಸಿದ ಸಲೀಂ ಅಹ್ಮದ್, ಕೆಲ ಶಾಸಕರು ನೀಡಿರುವ ಹೇಳಿಕೆಗಳು ಅವರ ವೈಯಕ್ತಿಕ ಅಭಿಪ್ರಾಯಗಳು ಮಾತ್ರ ಎಂದು ಹೇಳಿದರು.
ಸಿಎಂ ಹಾಗೂ ಡಿಸಿಎಂ ಕೂಡ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿರುವುದಾಗಿ ವಿವರಿಸಿದರು.
ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವವಿದ್ದು ಎಲ್ಲರಿಗೂ ಮಾತನಾಡುವ ಸ್ವಾತಂತ್ರ್ಯ ಇದೆ. ಆದರೆ ಬಿಜೆಪಿಯಲ್ಲಿ ಹಿಟ್ಲರ್ ಮಾದರಿಯ ಆಡಳಿತ ನಡೆಯುತ್ತಿದೆ ಎಂದು ಟೀಕಿಸಿದರು. ಯತಿಂದ್ರ ಅವರ ಹೇಳಿಕೆಯೂ ವೈಯಕ್ತಿಕ ಅಭಿಪ್ರಾಯವೇ ಆಗಿದೆ ಎಂದರು.
ಇದೇ ವೇಳೆ, ತಾನು ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ ಅವರು, ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಕಳೆದ 22 ವರ್ಷಗಳಿಂದ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ಅವಕಾಶ ಸಿಗಲಿದೆ ಎಂಬ ನಿರೀಕ್ಷೆ ಇದೆ ಎಂದು ಹೇಳಿದರು.
ಬರುವ ಏಪ್ರಿಲ್–ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ, ಚುನಾವಣಾ ಆಯೋಗದ ಮೇಲೆ ನಮಗೆ ವಿಶ್ವಾಸವಿಲ್ಲ, ಚುನಾವಣಾ ಆಯೋಗ ಬಿಜೆಪಿ ಕಮಿಷನ್ ಆಗಿ ಪರಿವರ್ತನೆಯಾಗಿದೆ.ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದರು.
