ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ತಡರಾತ್ರಿ ಭೀಕರ ಹತ್ಯೆಯೊಂದು ನಡೆದಿದೆ. ಬಹಿರ್ದೆಸೆಗೆ ತೆರಳಿದ್ದ ಕಾಂಗ್ರೆಸ್ ಮುಖಂಡನನ್ನು ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ, ಶವವನ್ನು ಬಾವಿಗೆ ಎಸೆದು ಪರಾರಿಯಾಗಿದ್ದಾರೆ. ಈ ಘಟನೆಯು ಸಾಗನೂರ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಸಾಗನೂರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡ ಶಿವಪ್ಪ ಮೇಟಿ (48) ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುರುವಾರ ತಡರಾತ್ರಿ ಶಿವಪ್ಪ ಅವರು ಬಹಿರ್ದೆಸೆಗಾಗಿ ಮನೆಯಿಂದ ಹೊರಬಂದಿದ್ದಾಗ, ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಅವರ ತಲೆಯ ಮೇಲೆ ಕಲ್ಲು ಹಾಕಿ ಪ್ರಾಣ ತೆಗೆದಿದ್ದಾರೆ. ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಕೊಲೆಯಾದ ವ್ಯಕ್ತಿಯ ಶವವನ್ನು ಸಮೀಪದ ಬಾವಿಗೆ ಎಸೆದು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇಂದು ಬೆಳಗ್ಗೆ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಘಟನಾ ಸ್ಥಳಕ್ಕೆ ಕೆರೂರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಈ ಕೊಲೆಗೆ ಆಸ್ತಿ ವಿವಾದ ಅಥವಾ ಅನೈತಿಕ ಸಂಬಂಧದ ಹಿನ್ನೆಲೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತ ಶಿವಪ್ಪ ಮೇಟಿ ಅವರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
