ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ ತೊಂಡಿಹಾಳ ಗ್ರಾಮದಲ್ಲಿ ತಡರಾತ್ರಿ ಭೀಕರ ಕೊಲೆಯೊಂದು ನಡೆದಿದ್ದು, ಇಡೀ ಜಿಲ್ಲೆಯೇ ಬೆಚ್ಚಿಬಿದ್ದಿದೆ. ದುಷ್ಕರ್ಮಿಗಳು ವ್ಯಕ್ತಿಯೊಬ್ಬನ ರುಂಡ ಕತ್ತರಿಸಿ, ಗುರುತು ಸಿಗದಂತೆ ಅರಣ್ಯ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ. ಪ್ರಸ್ತುತ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿದ್ದು, ತನಿಖೆ ತೀವ್ರಗೊಂಡಿದೆ.

ಇಳಕಲ್ ತಾಲ್ಲೂಕಿನ ತೊಂಡಿಹಾಳ ಗ್ರಾಮದ ಮಾರ್ಗದರ್ಶನ ಶಿಕ್ಷಣ ಸಂಸ್ಥೆಯ ಸಮೀಪವಿರುವ ಅರಣ್ಯ ಪ್ರದೇಶದಲ್ಲಿ ಈ ಅಮಾನವೀಯ ಘಟನೆ ಸಂಭವಿಸಿದೆ. ಫೆಬ್ರವರಿ 18ರ ರಾತ್ರಿ ರುಂಡವಿಲ್ಲದ ದೇಹವೊಂದು ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತನ ಗುರುತು ಪತ್ತೆಯಾಗಬಾರದು ಎಂಬ ಕಾರಣಕ್ಕೆ ಕೊಲೆಗಡುಕರು ರುಂಡವನ್ನು ಕತ್ತರಿಸಿ ಕೊಂಡೊಯ್ದಿದ್ದಾರೆ ಎನ್ನಲಾಗಿದ್ದು, ಘಟನಾ ಸ್ಥಳದಲ್ಲಿ ರಕ್ತಸಿಕ್ತ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇವರೊಂದಿಗೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಕೂಡ ಆಗಮಿಸಿದ್ದು, ಸಾಕ್ಷ್ಯಗಳ ಸಂಗ್ರಹಣೆಯಲ್ಲಿ ತೊಡಗಿದ್ದಾರೆ. ಹಂತಕರು ಕತ್ತರಿಸಿದ ರುಂಡ ಇನ್ನು ಪತ್ತೆಯಾಗದ ಕಾರಣ ಮೃತನ ಗುರುತು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಳಕಲ್ಲ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಹಳೆ ವೈಷಮ್ಯ ಅಥವಾ ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಆಯಾಮದಲ್ಲಿ ತನಿಖೆ ನಡೆಸಲಾಗುತ್ತಿದೆ.
