ಸ್ವತಂತ್ರ ಕರ್ನಾಟಕದ ಮೊದಲ ಮುಖ್ಯಮಂತ್ರಿ ದಿವಂಗತ ಕೆ.ಸಿ. ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ಇಂದು ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ರಾಜ್ಯದ ಅಭಿವೃದ್ಧಿಗೆ ಕೆ.ಸಿ. ರೆಡ್ಡಿ ಅವರು ನೀಡಿದ ಅಪ್ರತಿಮ ಕೊಡುಗೆಗಳನ್ನು ಸಿಎಂ ಸಿದ್ಧರಾಮಯ್ಯನವರು ಸ್ಮರಿಸಿದರು.


ದಿವಂಗತ ಕೆ.ಸಿ. ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿವಂಗತ ಕೆ.ಸಿ. ರೆಡ್ಡಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಕೇಂದ್ರ ಸರ್ಕಾರದ ಬೃಹತ್ ಕಾರ್ಖಾನೆಗಳು ಸ್ಥಾಪನೆಯಾಗುವಲ್ಲಿ ಕೆ.ಸಿ. ರೆಡ್ಡಿ ಅವರ ಪಾತ್ರ ಅತ್ಯಂತ ಪ್ರಮುಖವಾದುದು ಎಂದು ಬಣ್ಣಿಸಿದರು. ಮೈಸೂರು ಸಂಸ್ಥಾನವನ್ನು ಭಾರತದ ಒಕ್ಕೂಟ ವ್ಯವಸ್ಥೆಗೆ ಸೇರಿಸುವಲ್ಲಿ ಅವರು ವಹಿಸಿದ ಶ್ರಮ ಶ್ಲಾಘನೀಯ ಎಂದ ಸಿಎಂ, ಸ್ವಾತಂತ್ರ್ಯ ಹೋರಾಟದ ಹಾದಿಯಲ್ಲಿ ಹಲವು ಬಾರಿ ಸೆರೆವಾಸ ಅನುಭವಿಸಿದ ಅವರ ತ್ಯಾಗವನ್ನು ಸ್ಮರಿಸಿದರು. ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿ ಅವರು ಹಾಕಿಕೊಟ್ಟ ಆಡಳಿತಾತ್ಮಕ ನೀತಿಗಳು ಇಂದಿಗೂ ನಮಗೆ ಮಾರ್ಗದರ್ಶಿಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.
ಕೆ.ಸಿ. ರೆಡ್ಡಿ ಅವರು ಕೇವಲ ಮುಖ್ಯಮಂತ್ರಿಯಾಗಿ ಅಷ್ಟೇ ಅಲ್ಲದೆ, ಕೇಂದ್ರ ಸಚಿವರಾಗಿ ಮತ್ತು ರಾಜ್ಯಪಾಲರಾಗಿ ದೇಶಕ್ಕೆ ಸುದೀರ್ಘ ಸೇವೆ ಸಲ್ಲಿಸಿದ ಅಪರೂಪದ ಮುತ್ಸದ್ದಿ ಎಂದು ಸಿದ್ದರಾಮಯ್ಯ ಸ್ಮರಿಸಿದರು. ಅತ್ಯಂತ ಪ್ರಾಮಾಣಿಕ ವ್ಯಕ್ತಿತ್ವದ ಅವರು ಸಾರ್ವಜನಿಕ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಕಾಪಾಡಿಕೊಂಡಿದ್ದರು. ಇಂದಿನ ರಾಜಕಾರಣಿಗಳು ಮತ್ತು ಸಾರ್ವಜನಿಕರು ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ನಡೆಯುವ ಅವಶ್ಯಕತೆ ಇದೆ ಎಂದು ಕರೆ ನೀಡಿದ ಮುಖ್ಯಮಂತ್ರಿಗಳು, ಅವರ ಅಭಿವೃದ್ಧಿ ಪರ ಚಿಂತನೆಗಳನ್ನು ಸಾಕಾರಗೊಳಿಸುವುದೇ ನಾವು ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ತಿಳಿಸಿದರು.
ಈ ವೇಳೆ ವಿವಿಧ ಸಚಿವರು ಶಾಸಕರು ಇನ್ನಿತರರು ಉಪಸ್ಥಿತರಿದ್ಧರು.
