ಬೆಳಗಾವಿ ನಗರದಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಪೊಲೀಸರು ಈಗ ಹದ್ದಿನ ಕಣ್ಣಿಟ್ಟಿದ್ದಾರೆ. ಅದರಲ್ಲೂ ಪ್ರಮುಖವಾಗಿ ನಂಬರ್ ಪ್ಲೇಟ್ ಇಲ್ಲದೆ ಅಥವಾ ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿಕೊಂಡು ರಾಜಾರೋಷವಾಗಿ ಓಡಾಡುವ ಕಿಡಿಗೇಡಿಗಳಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ನಗರದಾದ್ಯಂತ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ ನೂರಾರು ವಾಹನಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಪ್ರಕಟಣೆಯಂತೆ, ನಗರ ವ್ಯಾಪ್ತಿಯಲ್ಲಿ ನಂಬರ್ ಪ್ಲೇಟ್ ಇಲ್ಲದ ಮತ್ತು ನಿಯಮಬಾಹಿರವಾಗಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿದ್ದ ವಾಹನಗಳ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಲಾಗಿದೆ. ಒಟ್ಟು 126 ದ್ವಿಚಕ್ರ ವಾಹನಗಳ ಮೇಲೆ ಮೋಟಾರು ವಾಹನ ಕಾಯ್ದೆ 1988ರ ಕಲಂ 177ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಯಾಚರಣೆಯ ಮೂಲಕ ಕೇವಲ ಒಂದೇ ದಿನದಲ್ಲಿ ಒಟ್ಟು 63,000 ರೂಪಾಯಿಗಳ ದಂಡವನ್ನು ಸ್ಥಳದಲ್ಲೇ ವಸೂಲಿ ಮಾಡಲಾಗಿದೆ.
ಪೊಲೀಸರು ಕೇವಲ ದಂಡ ವಿಧಿಸುವುದಕ್ಕೆ ಸೀಮಿತವಾಗದೆ, ನಿಯಮ ಉಲ್ಲಂಘಿಸಿದ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಸ್ಥಳದಲ್ಲಿಯೇ ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ತಮ್ಮ ವಾಹನಗಳಿಗೆ ನಿಗದಿತ ಮಾದರಿಯ ನಂಬರ್ ಪ್ಲೇಟ್‌ಗಳನ್ನೇ ಅಳವಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಮುಂಬರುವ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
