ವೀರರಾಣಿ ಬೆಳವಡಿ ಮಲ್ಲಮ್ಮನ ಶೌರ್ಯವನ್ನು ಸಾರುವ ಉದ್ದೇಶದಿಂದ ಬೈಲಹೊಂಗಲದಲ್ಲಿ ವಿಶೇಷ ಪ್ರತಿಷ್ಠಾನ ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಬೈಲಹೊಂಗಲ ಶಾಸಕ ಮಹಾಂತೇಶ್ ಕೌಜಲಗಿ ಅವರು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಮನವಿ ಸಲ್ಲಿಸಿದ್ದು, ಸರ್ಕಾರ ಶೀಘ್ರವೇ ಯೋಜನೆ ಜಾರಿಗೆ ತರುವ ಭರವಸೆ ನೀಡಿದೆ.

ಬೈಲಹೊಂಗಲ ಕ್ಷೇತ್ರದ ಅಭಿವೃದ್ಧಿ ಹಾಗೂ ಐತಿಹಾಸಿಕ ತಾಣಗಳ ಸಂರಕ್ಷಣೆಗೆ ವಿಶೇಷ ಒತ್ತು ನೀಡಿರುವ ಶಾಸಕ ಮಹಾಂತೇಶ್ ಕೌಜಲಗಿ ಅವರು, ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮನ ಹೆಸರಿನಲ್ಲಿ ಪ್ರತಿಷ್ಠಾನ ಸ್ಥಾಪಿಸುವಂತೆ ಪ್ರಬಲವಾಗಿ ಆಗ್ರಹಿಸಿದರು. ಇದರ ಮುಂದುವರಿದ ಭಾಗವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರನ್ನು, ಮಲ್ಲಮ್ಮನ ಐಕ್ಯ ಸ್ಥಳವನ್ನು ಐತಿಹಾಸಿಕ ಸ್ಮಾರಕವಾಗಿ ಅಭಿವೃದ್ಧಿಪಡಿಸುವಂತೆ ಮನವಿ ಮಾಡಿದರು.
ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಕೃಷ್ಣಭೈರೇಗೌಡ ಅವರು, ಮುಖ್ಯಮಂತ್ರಿಗಳು ಈಗಾಗಲೇ ಈ ಪ್ರತಿಷ್ಠಾನವನ್ನು ಜಾರಿಗೊಳಿಸಲು ಘೋಷಿಸಿದ್ದಾರೆ ಎಂದು ತಿಳಿಸಿದರು. ಪ್ರವಾಸೋದ್ಯಮ ಮತ್ತು ಐತಿಹಾಸಿಕ ತಾಣವಾಗಿ ಈ ಪ್ರದೇಶವನ್ನು ಅಭಿವೃದ್ಧಿಪಡಿಸಲು ಸಮಗ್ರ ಯೋಜನೆಯನ್ನು ಸಿದ್ಧಪಡಿಸಲಾಗುವುದು. ವೀರರಾಣಿಯ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸಲು ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.
