ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ-2026ರ ಅಂಗವಾಗಿ ಬೆಳಗಾವಿಯ ಮಾಹೇಶ್ವರಿ ಅಂದಮಕ್ಕಳ ಶಾಲೆ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಹಿಳೆಯರ ಹಕ್ಕುಗಳು ಮತ್ತು ಸಬಲೀಕರಣದ ಕುರಿತು ಜಾಗೃತಿ ಮೂಡಿಸಲಾಯಿತು.”


ಬೆಳಗಾವಿಯ ಮಾಹೇಶ್ವರಿ ಅಂದಮಕ್ಕಳ ಶಾಲೆ ಸಭಾಂಗಣದಲ್ಲಿಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆಡಳಿತ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಂದೀಪ್ ಪಾಟೀಲ ಅವರು ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಚೇತನಕುಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಸುರೇಖಾ ಪಾಟೀಲ ಹಾಗೂ ಮಲ್ಲೇಶ್ ಕುಂದರಗಿ ಅವರು ಮಹಿಳೆಯರು ಮತ್ತು ಮಕ್ಕಳ ರಕ್ಷಣೆ, ಕಾನೂನು ಅರಿವು ಹಾಗೂ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಉಪಯುಕ್ತ ಮಾಹಿತಿ ನೀಡಿದರು. ಲಿಂಗ ಸಮಾನತೆ ಮತ್ತು ಮಹಿಳೆಯರ ಗೌರವವನ್ನು ಎತ್ತಿಹಿಡಿಯುವ ಸಂದೇಶದೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಯೋಜನಾ ಅಧಿಕಾರಿ ಅನ್ನಪ್ಪ ಹೆಗಡೆ, ಜಿಲ್ಲಾ ಮಹಿಳಾ ಕಲ್ಯಾಣಾಧಿಕಾರಿ ಶ್ರೀಮತಿ ಕಂಚನ ಅಮಟೆ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

