ರಾಜ್ಯದ ಸರ್ಕಾರಿ ಸಂಸ್ಥೆಗಳಿಂದ ನೀಡಲಾಗುವ ಐಎಎಸ್, ಕೆಎಎಸ್ ತರಬೇತಿ ಪಡೆಯಲು ಬರುವ ಎಸ್ಸಿ, ಎಸ್ಟಿ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಯಾವುದೇ ವಸತಿ ಅಥವಾ ಶಿಷ್ಯವೇತನ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮತ್ತೊಂದೆಡೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಎಸ್ಎಸ್ಸಿ ಹಾಗೂ ಆರ್ಆರ್ಬಿ ಉದ್ಯೋಗಕ್ಕೆ ಅಲ್ಪಸಂಖ್ಯಾತರಿಗೆ ಮಾಸಿಕ 6,000 ಶಿಷ್ಯವೇತನ ನೀಡಲಾಗುತ್ತದೆ. ಇದ್ಯಾವ ತಾರತಮ್ಯ ಎಂದು ಗೊತ್ತಾಗುತ್ತಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ಹೊರಹಾಕಿದರು.

ರಾಜ್ಯ ಬಜೆಟ್ ಅಧಿವೇಶನದಲ್ಲಿ ಗುರುವಾರ ಮಾತನಾಡಿದ ಪ್ರತಿಪಕ್ಷ ನಾಯಕ ಆರ್. ಅಶೋಕ್, ಸರ್ಕಾರಿ ತರಬೇತಿ ಸಂಸ್ಥೆಗಳಲ್ಲಿ ನಡೆಯುತ್ತಿರುವ ಗೊಂದಲ ಹಾಗೂ ತಾರತಮ್ಯದ ನೀತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗಾಗಿ ಮೀಸಲಿಟ್ಟ ಐಎಎಸ್ ಹಾಗೂ ಕೆಎಎಸ್ ತರಬೇತಿ ಯೋಜನೆಯಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತದ ನಡುವಿನ ಸಮನ್ವಯದ ಕೊರತೆಯನ್ನು ತೀವ್ರವಾಗಿ ಟೀಕಿಸಿದರು.
ಕಲ್ಯಾಣ ಕರ್ನಾಟಕದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳಾಗಬೇಕು ಎಂಬ ಆಶಯದೊಂದಿಗೆ 100 ಐಎಎಸ್ ಹಾಗೂ 400 ಕೆಎಎಸ್ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಸರ್ಕಾರ ಆದೇಶಿಸಿತ್ತು. ಆದರೆ, ಈ ಆದೇಶ ಜಾರಿಯಲ್ಲಿ ಜಿಲ್ಲಾಧಿಕಾರಿಗಳು ತಮಗಿಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೆ’ ಎಂದು ಅಶೋಕ್ ಆರೋಪಿಸಿದರು.
ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯಗಳಲ್ಲಿ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಅಶೋಕ್ ದೂರಿದರು. ‘ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ತನ್ನ ಅಭ್ಯರ್ಥಿಗಳಿಗೆ 12 ತಿಂಗಳ ಕಾಲ ವಸತಿ ಸಹಿತ ತರಬೇತಿ ನೀಡುತ್ತಿದೆ. ಅಷ್ಟೇ ಅಲ್ಲದೆ, ಎಸ್ಎಸ್ಸಿ ಹಾಗೂ ಆರ್ಆರ್ಬಿ ಪರೀಕ್ಷೆಗಳಿಗೆ ಸಿದ್ಧರಾಗುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 6,000 ರೂ. ಶಿಷ್ಯವೇತನ ನೀಡಲಾಗುತ್ತಿದೆ. ಆದರೆ, ಎಸ್ಸಿ-ಎಸ್ಟಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಶಿಷ್ಯವೇತನವೂ ಇಲ್ಲ, ವಸತಿ ಸೌಲಭ್ಯವೂ ಇಲ್ಲ. ಇದು ಯಾವ ನ್ಯಾಯ?’ ಎಂದು ಅವರು ಪ್ರಶ್ನಿಸಿದರು.
