ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನಿಚ್ಚನಕ್ಕಿ ಗ್ರಾಮದಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಿನೊಂದಿಗೆ ಕೊಳಚೆ ಗುಂಡಿಯ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಗ್ರಾಮಸ್ಥರು ಸಂಚರಿಸಲು ನರಕಯಾತನೆ ಪಡುವಂತಾಗಿದೆ. ಗ್ರಾಮ ಪಂಚಾಯತ್ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ.


ಕಿತ್ತೂರು ತಾಲೂಕಿನ ನಿಚ್ಚನಕ್ಕಿ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಇಡೀ ಗ್ರಾಮದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ, ಮಳೆ ನೀರು ಹೊರಹೋಗಲು ಜಾಗವಿಲ್ಲದೇ ಕೊಳಚೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಇದು ರಸ್ತೆಯೋ ಅಥವಾ ಕೊಳಚೆ ಗುಂಡಿಯೋ ಎಂಬ ಅನುಮಾನ ಕಾಡುವಂತಾಗಿದೆ. ದುರ್ವಾಸನೆ ಹಾಗೂ ಕೆಸರು ಗದ್ದೆಯಂತಾಗಿರುವ ರಸ್ತೆಗಳಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಓಡಾಡಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಳೆಗಾಲ ಆರಂಭವಾಗುವ ಮುನ್ನವೇ ಚರಂಡಿ ಹಾಗೂ ಕೊಳಚೆಗುಂಡಿಗಳನ್ನು ಸ್ವಚ್ಛಗೊಳಿಸಬೇಕಿದ್ದ ಗ್ರಾಮ ಪಂಚಾಯತಿ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ. “ಪಿಡಿಒ ಸಾಹೇಬ್ರೇ, ಇನ್ನೂ ನಿದ್ದೆಯಲ್ಲೇ ಇದ್ದೀರಾ?” ಎಂದು ಪ್ರಶ್ನಿಸುತ್ತಿರುವ ಜನರು, ಮಳೆಗಾಲ ಬಾಗಿಲಲ್ಲಿದ್ದರೂ ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡದ ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವರೇ ಎಂಬುದನ್ನು ಕಾದು ನೋಡಬೇಕಿದೆ.
