ಗ್ಯಾರಂಟಿ ಯೋಜನೆಗಳ ಬೆನ್ನುಹತ್ತಿದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಯುವಕರಿಗೆ ಉದ್ಯೋಗ ನೀಡಲು ಎಷ್ಟು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಆಕ್ರೋಶ ವ್ಯಕ್ತಪಡಿಸಿದರು.

ಚಿಕ್ಕೋಡಿಯ ಕೇಶವ ಕಲಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 2.50 ಲಕ್ಷಕ್ಕೂ ಅಧಿಕ ಖಾಲಿ ಹುದ್ದೆಗಳಿದ್ದು, ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಹೇಗೆ ಆಡಳಿತ ನಡೆಸಲಿದೆ ಎಂದು ಪ್ರಶ್ನಿಸಿದರು.
ನಿರುದ್ಯೋಗ ಸಮಸ್ಯೆ ಯುವಕರನ್ನು ಕಂಗೆಡಿಸಿದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಸಾವಿರಾರು ಯುವಕರು ಧಾರವಾಡದಲ್ಲಿ ಹೋರಾಟ ನಡೆಸಿದರೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದೇ ಇರುವುದು ವಿಪರ್ಯಾಸಕರ ಸಂಗತಿ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ರಚನೆಯಾಗುವ ಸಂದರ್ಭದಲ್ಲಿ ‘ಸರ್ಕಾರದ ನಡಿಗೆ ಕೃಷ್ಣ ಕಡೆಗೆ’ ಎಂದು ಘೋಷಣೆ ಮಾಡಲಾಗಿತ್ತು. ಆದರೆ
ಇದುವರೆಗೆ ಯಾವುದೇ ಪ್ರಮುಖ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿಲ್ಲ. ನೀರಾವರಿ ಯೋಜನೆಗಳಿಗೆ ಅಗತ್ಯವಾದ ಅನುದಾನವನ್ನು ಸಮರ್ಪಕವಾಗಿ ಬಿಡುಗಡೆ ಮಾಡಿಲ್ಲ ಇದರಿಂದ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದೆ ಎಂದು ಆರೋಪಿಸಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಕರ್ನಾಟಕಕ್ಕೆ 14 ನೀರಾವರಿ ಯೋಜನೆ ಗಳನ್ನು ಮಂಜೂರು ಮಾಡಿದ್ದರು. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಆ ಯೋಜನೆಗಳಿಗೆ ಅಗತ್ಯ ಹಣ ಬಿಡುಗಡೆ ಮಾಡಿಲ್ಲ ಎಂದರು.
ರಾಜ್ಯ ಸರ್ಕಾರದ ಶೇ.80 ರಷ್ಟು ಹಣ ಗ್ಯಾರಂಟಿ ಯೋಜನೆಗಳಿಗೆ ಹೋಗುತ್ತಿದ್ದು ಕೇವಲ ಶೇ. 20 ರಷ್ಟು ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ಉಳಿಯುತ್ತಿದೆ. ಇಷ್ಟು ಕಡಿಮೆ ಹಣದಲ್ಲಿ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದ ಅವರು ಉತ್ತರ ಕರ್ನಾಟಕದ ನಿರ್ಲಕ್ಷ ಸರಿಯಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಪಿ. ರಾಜೀವ್, ಶ್ರೀಧರ ಮೂಡಲಗಿ, ಸತೀಶ ಅಪ್ಪಾಜಿಗೋಳ, ಅಮೃತ ಕುಲಕರ್ಣಿ, ಸದಾನಂದ ಹಳಂಗಳಿ, ಮಹೇಶ ಭಾತೆ, ಶಾಂಭವಿ ಅಶ್ವಥಪೂರ ಮುಂತಾದವರು ಉಪಸ್ಥಿತರಿದರು.
