ಬಾಗಲಕೋಟೆ ಉಪಚುನಾವಣೆಯ ಅಖಾಡ ಈಗ ಕಾವೇರುತ್ತಿದೆ. ಇದರ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣಗಳು ಕೂಡ ಹೆಚ್ಚಾಗುತ್ತಿವೆ. ಇಳಕಲ್ ತಾಲೂಕಿನ ಗುಗ್ಗಲಮರಿ ಚೆಕ್ಪೋಸ್ಟ್ನಲ್ಲಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಬಾಗಲಕೋಟೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿರುವ ಅಧಿಕಾರಿಗಳಿಗೆ ಗುಗ್ಗಲಮರಿ ಚೆಕ್ಪೋಸ್ಟ್ನಲ್ಲಿ ಭರ್ಜರಿ ಬೇಟೆ ಸಿಕ್ಕಿದೆ. ಇಳಕಲ್ ತಾಲೂಕಿನ ಈ ಚೆಕ್ಪೋಸ್ಟ್ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಎಸ್ಎಸ್ಟಿ (SST) ತಂಡದ ಅಧಿಕಾರಿಗಳು, ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎ 01 ಎಂ.ಪಿ.0600 ಸಂಖ್ಯೆಯ ಇನೋವಾ ಕ್ರೀಸ್ಟಾ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 2,30,000 ರೂಪಾಯಿ ನಗದನ್ನು ಪತ್ತೆಹಚ್ಚಿ ಜಪ್ತಿ ಮಾಡಿದ್ದಾರೆ. ಹಣದ ಮೂಲದ ಬಗ್ಗೆ ಕಾರಿನಲ್ಲಿದ್ದವರು ಸರಿಯಾದ ಮಾಹಿತಿ ನೀಡದ ಕಾರಣ, ಚುನಾವಣಾ ಆಯೋಗದ ಅಧಿಕಾರಿಗಳು ಹಣವನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಉಪಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಹಾಗೂ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ.
