• ಬೈಲಹೊಂಗಲ ಬಸ್ ಡಿಪೋಗೆ ವಿದ್ಯಾರ್ಥಿಗಳ ಮುತ್ತಿಗೆ.
• ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ತೀವ್ರ ಆಕ್ರೋಶ.
• ಶಾಸಕ ಬಾಬಾಸಾಹೇಬ್ ಪಾಟೀಲ್ ಕ್ಷೇತ್ರದಲ್ಲೇ ಕಿರಿಕಿರಿ.
• ಯರಡಾಲ, ನೇಗಿನಾಳ ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಯರಡಾಲ ಹಾಗೂ ನೇಗಿನಾಳ ಸೇರಿದಂತೆ ಹಲವು ಗ್ರಾಮಗಳ ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕಾಗಿ ಪರದಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲದೆ ಬೇಸತ್ತ ವಿದ್ಯಾರ್ಥಿಗಳು, ಇಂದು ಬೈಲಹೊಂಗಲ ಬಸ್ ಡಿಪೋಗೆ ಮುತ್ತಿಗೆ ಹಾಕಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿದಿನ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಬಸ್ ಸೌಲಭ್ಯ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಈ ಕುರಿತು ಸಾರಿಗೆ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಡಿಪೋಗೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದರು.
ವಿಶೇಷವೆಂದರೆ, ಕಿತ್ತೂರು ಕ್ಷೇತ್ರದ ಶಾಸಕರಾದ ಬಾಬಾಸಾಹೇಬ್ ಪಾಟೀಲ್ ಅವರ ಕ್ಷೇತ್ರದಲ್ಲಿಯೇ ಈ ಸಮಸ್ಯೆ ಮುಂದುವರಿಯುತ್ತಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಯರಡಾಲ ಮತ್ತು ನೇಗಿನಾಳ ಸುತ್ತಮುತ್ತಲಿನ ಹಳ್ಳಿಗಳಿಂದ ಬೈಲಹೊಂಗಲ ಪಟ್ಟಣಕ್ಕೆ ಬರುವ ನೂರಾರು ವಿದ್ಯಾರ್ಥಿಗಳು ಪ್ರತಿನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ.
ನಿನ್ನೆ ನಡೆದ ಈ ಪ್ರತಿಭಟನೆಯಲ್ಲಿ ಸಾಮಾಜಿಕ ಹೋರಾಟಗಾರರಾದ ಬಾಬು ಪಾಟೀಲ್, ಈರಪ್ಪ ಕರೆನ್ನವರ ಸೇರಿದಂತೆ ಹಲವು ಗಣ್ಯರು ವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿದರು. ಪ್ರತಿಭಟನೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಡಿಪೋ ಮ್ಯಾನೇಜರ್ ಅವರನ್ನು ತರಾಟೆಗೆ ತೆಗೆದುಕೊಂಡು, ಶೀಘ್ರವಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು.
ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಅವರು ಹಾಗೂ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಈ ವಿದ್ಯಾರ್ಥಿಗಳ ಕೂಗಿಗೆ ಸ್ಪಂದಿಸಿ, ಶಾಶ್ವತ ಪರಿಹಾರ ಒದಗಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
