1. ತಿಗಡಿಯಲ್ಲಿ ಬ್ಯಾಳಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ
2. ಜಡಿಸಿದ್ದೇಶ್ವರ ಶಿವಾಚಾರ್ಯ ಶ್ರೀಗಳಿಂದ ಪೂಜಾ ವಿಧಿವಿಧಾನ
3. ಮಾಜಿ ಶಾಸಕ ಮಹಾಂತೇಶ್ ದೊಡ್ಡಗೌಡರಿಗೆ ಸನ್ಮಾನ
4. ಇಂದು ರಾತ್ರಿ ಅದ್ದೂರಿ ಕೃಷ್ಣ ಪಾರಿಜಾತ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಇಂದು ಧಾರ್ಮಿಕ ಸಂಭ್ರಮ ಮನೆ ಮಾಡಿತ್ತು. ಗ್ರಾಮದ ಆರಾಧ್ಯ ದೈವ ಶ್ರೀ ಬ್ಯಾಳಿ ಬಸವೇಶ್ವರ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವವು ಅತ್ಯಂತ ಅದ್ದೂರಿಯಾಗಿ ನೆರವೇರಿತು. ದೊಡ್ಡವಾಡದ ಪೂಜ್ಯ ಶ್ರೀ ಜಡಿಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಪುನೀತರಾದರು.
ಕಾರ್ಯಕ್ರಮದ ಅಂಗವಾಗಿ ಬೆಳ್ಳಂಬೆಳಿಗ್ಗೆಯಿಂದಲೇ ಬ್ಯಾಳಿ ಬಸವೇಶ್ವರ ದೇವಸ್ಥಾನದಲ್ಲಿ ವಿವಿಧ ಹೋಮ-ಹವನ ಹಾಗೂ ವಿಶೇಷ ಪೂಜಾ ವಿಧಿವಿಧಾನಗಳು ಜರುಗಿದವು. ಶ್ರೀಗಳ ಮಾರ್ಗದರ್ಶನದಲ್ಲಿ ಶಾಸ್ತ್ರೋಕ್ತವಾಗಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮಾಡಲಾಯಿತು. ಮಧ್ಯಾಹ್ನ ನೆರೆದಿದ್ದ ಸಹಸ್ರಾರು ಭಕ್ತಾದಿಗಳಿಗೆ ಅನ್ನಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಕಿತ್ತೂರು ಕ್ಷೇತ್ರದ ಮಾಜಿ ಶಾಸಕ ಮಹಾಂತೇಶ್ ದೊಡ್ಡಗೌಡರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಸ್ಥಾನ ಸಮಿತಿ ಹಾಗೂ ಗ್ರಾಮದ ಯುವಕರು ಮಾಜಿ ಶಾಸಕರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಇನ್ನು ಧಾರ್ಮಿಕ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಇಂದು ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ‘ಶ್ರೀ ಕೃಷ್ಣ ಪಾರಿಜಾತ’ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಗ್ರಾಮದ ಪ್ರಮುಖರು ಹಾಗೂ ದೇವಸ್ಥಾನ ಸಮಿತಿಯ ಪದಾಧಿಕಾರಿಗಳು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಒಟ್ಟಾರೆ ತಿಗಡಿ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಭಕ್ತಿಭಾವ ಪರಕಾಷ್ಠೆ ತಲುಪಿತ್ತು.
