ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಸಾವು ಅಟ್ಟಹಾಸ ಮೆರೆದಿದೆ. ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ನಿಂತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ಬೆಳಗಾವಿ: ಇಲ್ಲಿನ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಲ್ಲಾಪುರದಿಂದ ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಕೋಳಿಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್ಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗೂಡ್ಸ್ ವಾಹನ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ನೂರಾರು ಕೋಳಿಗಳು ಸಹ ಮೃತಪಟ್ಟಿವೆ. ಮುಂಜಾನೆ ಚಾಲಕ ನಿದ್ರೆಯ ಮಂಪರಿನಲ್ಲಿದ್ದ ಕಾರಣ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಈ ದುರ್ಘಟನೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಕ್ಕಪೇಟೆ ನಿವಾಸಿಗಳಾದ ವಾಸೀಮ್ (28) ಮತ್ತು ಮುಬಾರಕ್ (22) ಎಂಬುವವರು ದಾರುಣವಾಗಿ ಮೃತಪಟ್ಟಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡಿರುವ ವಾಹನ ಚಾಲಕ, ಶಿಕಾರಿಪುರ ತಾಲೂಕಿನ ಮುಗಳಿಕೊಪ್ಪ ಗ್ರಾಮದ ಬಸವರಾಜ ಹಂಚಿನಮನಿ (37) ಅವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹಿರೇಬಾಗೆವಾಡಿ ಪಿಎಸ್ಐ ಅವಿನಾಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
