ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಭೀಕರ ಕೊಲೆ ಪ್ರಕರಣವೊಂದು ವರದಿಯಾಗಿದೆ. ತುಂಗಳ ಗ್ರಾಮದಲ್ಲಿ ಮಲಗಿದ್ದ ಇಬ್ಬರು ವ್ಯಕ್ತಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ಎತ್ತಿಹಾಕಿ ಅಟ್ಟಹಾಸ ಮೆರೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಈ ಘೋರ ಕೃತ್ಯ ನಡೆದಿದೆ. ಮನೆಯ ಮುಂದಿನ ಅಂಗಳದಲ್ಲಿ ಅಶೋಕ್ ಕೋಳಿ (35) ಮತ್ತು ಉತ್ತಮ ಶಿಂಧೆ (40) ಎಂಬುವವರು ಮಲಗಿದ್ದಾಗ, ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ನಿದ್ರೆಯಲ್ಲಿದ್ದ ಅಶೋಕ್ ಕೋಳಿ ಅವರ ತಲೆ ಮೇಲೆ ಕಲ್ಲು ಎತ್ತಿಹಾಕಿದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅಶೋಕ್ ಅವರ ಪಕ್ಕದಲ್ಲೇ ಮಲಗಿದ್ದ ಉತ್ತಮ ಶಿಂಧೆ ಮೇಲೂ ಹಲ್ಲೆ ನಡೆಸಲಾಗಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯರು ಕೂಡಲೇ ಗಾಯಾಳು ಉತ್ತಮ ಶಿಂಧೆಯನ್ನು ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಳಗಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೃತ್ಯಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಂತಕರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ತನಿಖೆಯನ್ನು ಚುರುಕುಗೊಳಿಸಿದ್ದಾರೆ.
