ಬಾಗಲಕೋಟೆಯಲ್ಲಿಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೀದಿಗೆ ಇಳಿದಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನೂರಾರು ಕಾರ್ಯಕರ್ತೆಯರು ಜಮಾಯಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.


ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಎಐಟಿಯುಸಿ (AITUC) ಸಂಘಟನೆಯ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆಯ ನೂರಾರು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಕಳೆದ ಹಲವು ತಿಂಗಳಿಂದ ತಮಗೆ ಬರಬೇಕಾದ ಗೌರವ ಧನ ಹಾಗೂ ಪ್ರೋತ್ಸಾಹ ಧನ ಬಿಡುಗಡೆಯಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಸರಿಯಾದ ಸಮಯಕ್ಕೆ ಸಂಬಳ ನೀಡದಿದ್ದರೂ, ಸರ್ಕಾರ ಮಾತ್ರ ಕೆಲಸದ ಒತ್ತಡವನ್ನು ದಿನೇ ದಿನೇ ಹೆಚ್ಚಿಸುತ್ತಿದೆ. ಬಿಡುವಿಲ್ಲದ ಕೆಲಸದ ನಡುವೆ ಒತ್ತಡದ ಜೀವನ ನಡೆಸುತ್ತಿದ್ದರೂ ಸರ್ಕಾರ ಮಾತ್ರ ನಮ್ಮ ಕಷ್ಟಕ್ಕೆ ಕಣ್ಣಾಗಿಲ್ಲ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಂಡರು.

ಪ್ರತಿಭಟನೆಯಲ್ಲಿ ಪ್ರಮುಖವಾಗಿ ಬಾಕಿ ಇರುವ ವೇತನ ಬಿಡುಗಡೆ, ಕೆಲಸದ ಅವಧಿ ನಿಗದಿ ಹಾಗೂ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಅವರು, ಕೂಡಲೇ ನಮ್ಮ ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಜನರ ಆರೋಗ್ಯ ಸೇವೆಗಾಗಿ ಹಗಲಿರುಳು ಶ್ರಮಿಸುವ ನಮಗೆ ಕನಿಷ್ಠ ಮಾನವೀಯತೆಯ ದೃಷ್ಟಿಯಿಂದಲಾದರೂ ನ್ಯಾಯ ಸಿಗಬೇಕು ಎಂದು ಆಶಾ ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಒತ್ತಾಯಿಸಿದರು.
