ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಜಮೀನು ವಿವಾದವೊಂದು ವಿಕೋಪಕ್ಕೆ ತಿರುಗಿದ್ದು, ಹಾಡಹಗಲೇ ರಕ್ತ ಹರಿದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಪ್ರಾಣ ತೆಗೆಯುವ ಹಂತಕ್ಕೆ ತಲುಪಿದ್ದು, ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ಜಾಗದ ವಿಚಾರವಾಗಿ ನಡೆದ ಭೀಕರ ಗಲಾಟೆಯಲ್ಲಿ ಐವರ ಮೇಲೆ 15 ಜನರ ಗುಂಪು ಮಾರಣಾಂತಿಕ ದಾಳಿ ನಡೆಸಿದೆ. ಸುಮಾರು 6 ಗುಂಟೆ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ಜಾವೀದ್ ಸಾಂಗ್ಲಿಕರ್ ನೇತೃತ್ವದ ತಂಡವು ಕಟ್ಟಿಗೆ ಹಾಗೂ ಕಬ್ಬಿಣದ ರಾಡ್‌ಗಳೊಂದಿಗೆ ಬಂದು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ದಾಳಿಯಲ್ಲಿ ಹಾಶೀಮ್ ಜಕಲಿ, ಸೈಯದ್ ಜಕಲಿ ಹಾಗೂ ಶರೀಫ್ ಜಕಲಿ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದೇ ಕೋಮಿನ ಎರಡು ಗುಂಪುಗಳ ನಡುವೆ ನಡೆದ ಈ ಘರ್ಷಣೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸದ್ಯ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

