ಮೈಸೂರು:
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಭದ್ರತೆಯ ಆಶಾಕಿರಣವಾಗುತ್ತಿರುವುದಕ್ಕೆ ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಮಾಧುರಿ ಆರ್. ಅವರ ಸಾಧನೆಯೇ ಸಾಕ್ಷಿಯಾಗಿದೆ.
2026ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 624 ಅಂಕಗಳನ್ನು ಗಳಿಸುವ ಮೂಲಕ ಮಾಧುರಿ ಆರ್. ಅವರು ಅಪೂರ್ವ ಸಾಧನೆ ಮಾಡಿದ್ದಾರೆ. ಅವರ ಈ ಯಶಸ್ಸಿನ ಹಿಂದೆ ಕುಟುಂಬದ ಪರಿಶ್ರಮದ ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಸಹಕಾರವೂ ಪ್ರಮುಖ ಪಾತ್ರವಹಿಸಿದೆ.
ಮಾಧುರಿ ಅವರ ತಾಯಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗಿದ್ದು, ಸರ್ಕಾರದಿಂದ ದೊರೆಯುತ್ತಿರುವ ಆರ್ಥಿಕ ಸಹಾಯವನ್ನು ಮಗಳ ವಿದ್ಯಾಭ್ಯಾಸದ ಅಗತ್ಯಗಳಿಗೆ ಬಳಸಿಕೊಂಡು ಸದುಪಯೋಗಪಡಿಸಿಕೊಂಡಿದ್ದಾರೆ. ಈ ಮೂಲಕ ಸರ್ಕಾರದ ಯೋಜನೆಗಳು ಸರಿಯಾದ ಫಲಾನುಭವಿಗಳ ಕೈ ಸೇರಿದಾಗ ಸಮಾಜದಲ್ಲಿ ಹೇಗೆ ಸಕಾರಾತ್ಮಕ ಬದಲಾವಣೆ ತರಬಹುದು ಎಂಬುದಕ್ಕೆ ಈ ಕುಟುಂಬ ಮಾದರಿಯಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನಿರ್ದೇಶನದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಇಂದು ಮಾಧುರಿ ಅವರ ನಿವಾಸಕ್ಕೆ ಭೇಟಿ ನೀಡಿ, ಸಿಹಿ ಹಂಚಿ ಅಭಿನಂದಿಸಿದರು.
ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, “ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳ ಕೈ ಸೇರಿದಾಗ ಇಂತಹ ಅಮೋಘ ಸಾಧನೆಗಳು ಸಾಧ್ಯವಾಗುತ್ತವೆ. ಮಾಧುರಿ ಆರ್. ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ವಿದ್ಯಾರ್ಥಿನಿ ಹಾಗೂ ಅವರ ಪೋಷಕರಿಗೆ ಇಲಾಖೆಯ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು” ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೂರ್ಗಳ್ಳಿ ಮಹದೇವು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಬ್ಬಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು

