ಸರ್ಕಾರ ಮಂಜೂರು ಮಾಡಿದ ಸ್ಮಶಾನ ಭೂಮಿಯನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಣ ಮಾಡಿಕೊಂಡಿರುವ ಗಂಭೀರ ಪ್ರಕರಣ ಖಾನಾಪುರ ತಾಲೂಕಿನ ಅಶೋಕ ನಗರ ನೆರಸೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನ್ಯಾಯಕ್ಕಾಗಿ ಆಗ್ರಹಿಸಿ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಕೂಡಲೇ ಒತ್ತುವರಿ ತೆರವುಗೊಳಿಸುವಂತೆ ಆಗ್ರಹಿಸಿದ್ದಾರೆ.

ಖಾನಾಪುರ ತಾಲೂಕಿನ ಅಶೋಕ ನಗರ ನೆರಸೆ ಗ್ರಾಮದ ಸರ್ವೆ ನಂಬರ್ 37/ಬ ಹಾಗೂ 43ರಲ್ಲಿ ಸ್ಮಶಾನಕ್ಕಾಗಿ ಸರ್ಕಾರ ಭೂಮಿ ಮಂಜೂರು ಮಾಡಿದ್ದರೂ, ಸ್ಥಳೀಯ ಮುತ್ತು ಪಾಟೀಲ ಎಂಬ ಕುಟುಂಬ ಅದನ್ನು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದಾಗಿ ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲದಂತಾಗಿದ್ದು, ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂಘಟನೆಯ ರಾಜ್ಯ ಅಧ್ಯಕ್ಷ ಮಹೇಶ್ ಎಸ್. ಶೀಗಿಹಳ್ಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬೆಳಗಾವಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗವು ಸಮಸ್ಯೆಯ ಕುರಿತು ವಿವರವಾಗಿ ಚರ್ಚಿಸಿದ್ದು, ಡಿಸಿಯವರು ಸಕಾರಾತ್ಮಕವಾಗಿ ಸ್ಪಂದಿಸಿ ತಹಶೀಲ್ದಾರರಿಗೆ ನಿರ್ದೇಶನ ನೀಡುವ ಭರವಸೆ ನೀಡಿದ್ದಾರೆ. ಒಂದು ವೇಳೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಖಾನಾಪುರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ, ಬೀಗ ಜಡಿದು ಉಗ್ರ ಹೋರಾಟ ಮಾಡುವುದಾಗಿ ಶೀಗಿಹಳ್ಳಿ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಅಧ್ಯಕ್ಷ ಆನಂದ ಊದಿ, ಸುನೀಲ ನಾಯಕ, ರೋಹಿತ ಅರಳಗುಂದಿ ಹಾಗೂ ಭೀಮಶಿ ಬೊರವಗೊಳ ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.
