Bagalkot

ಬಾಗಲಕೋಟೆ: ಕಲಾದಗಿ ಗುರುಲಿಂಗೇಶ್ವರ ಕಾಲೇಜಿನಲ್ಲಿ ಭೀಕರ ಅಗ್ನಿ ಅವಘಡ; ಉಪನ್ಯಾಸಕರ ಕೊಠಡಿ ಸಂಪೂರ್ಣ ಭಸ್ಮ!

Share

ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಗುರುಲಿಂಗೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಇಂದು ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕಾಲೇಜಿನ ಉಪನ್ಯಾಸಕರ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಕೊಠಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪರಿಕರಗಳು ಬೆಂಕಿಗೆ ಆಹುತಿಯಾಗಿವೆ.

ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ ಕಾಲೇಜು ಆರಂಭದ ವೇಳೆಯಲ್ಲೇ ಉಪನ್ಯಾಸಕರ ಕೊಠಡಿಯಿಂದ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ನೋಡನೋಡುತ್ತಿದ್ದಂತೆ ಶಾರ್ಟ್ ಸರ್ಕ್ಯೂಟ್‌ನಿಂದ ಆವರಿಸಿದ ಬೆಂಕಿ ಇಡೀ ಕೊಠಡಿಯನ್ನು ಆಹುತಿ ಪಡೆದಿದ್ದು, ಒಳಗಿದ್ದ ಪೀಠೋಪಕರಣಗಳು ಹಾಗೂ ಇತರೆ ಸಾಮಗ್ರಿಗಳು ಸುಟ್ಟು ಭಸ್ಮವಾಗಿವೆ. ಇನ್ನು ಕೊಠಡಿಯಲ್ಲಿದ್ದ ವಿದ್ಯಾರ್ಥಿಗಳ ಕೆಲವು ಪ್ರಮುಖ ದಾಖಲಾತಿಗಳಿಗೂ ಅಲ್ಪ ಪ್ರಮಾಣದ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಸಿಬ್ಬಂದಿ ದೂರ ಸರಿದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಕಾಲೇಜಿನ ಇತರೆ ತರಗತಿ ಕೊಠಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಕಲಾದಗಿ ಉಪತಹಸೀಲ್ದಾರ್ ಭೇಟಿ ನೀಡಿ ಹಾನಿಯ ಕುರಿತು ಪರಿಶೀಲನೆ ನಡೆಸಿದ್ದು, ಕಲಾದಗಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

error: Content is protected !!